ಪ್ರಿಯಾಂಕಾ,ಜ್ಯೋತಿರಾಧಿತ್ಯರಿಂದ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ-ರಾಹುಲ್
ಲಖನೌ: ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ಅಚಲ ವಿಶ್ವಾಸ ಹೊಂದಿರುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶ ಪೂರ್ವ ಹಾಗೂ ಪಶ್ಚಿಮದ ಉಸ್ತುವಾರಿಯಾಗಿ ಕ್ರಮವಾಗಿ ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ನೇಮಕ ಮಾಡಿದ ಬಳಿಕ ಅಮೇಥಿಯಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇವರುಗಳ ಮೂಲಕ ಅತ್ಯಂತ ಹಳೆಯ ಪಕ್ಷವಾಗಿರುವ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಿಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರಿಗೆ ಉಸ್ತುವಾರಿ ವಹಿಸಲಾಗಿದೆ. ಈಗ ದೇಶದಲ್ಲಿ ಮೂವರು ಯೋಧರು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡಲಿದ್ದು, ಪ್ರಿಯಾಂಕಾ ಗಾಂಧಿ ಹೊಸ ಅಧಿಕಾರ ವಹಿಸಿಕೊಂಡ ನಂತರ ಅಮೇಥಿ ಹಾಗೂ ರಾಯ್ ಬರೇಲಿಗೆ ಬರುವಂತೆ ಕೇಳಿದ್ದೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಅಧಿಕಾರಕ್ಕೆ ಬರುವ ಮುನ್ನ ಜನರ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಏನನ್ನೂ ಮಾಡಲಿಲ್ಲ. ಇದಕ್ಕೆ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ ಗಡ ಚುನಾವಣೆಯಲ್ಲಿ ಏನು ಆಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ