ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾ ಮೇಜರ್ ಒಬ್ಬರು ಹುತಾತ್ಮರಾಗಿದ್ದು, ಮತ್ತೊಬ್ಬ ಮೇಜರ್ ಹಾಗೂ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಪೊಲೀಸ್ ಸಿಬ್ಬಂದಿಯ ವಿಶೇಷ ಕಾರ್ಯಪಡೆ ಮತ್ತು ರಾಷ್ಟ್ರೀಯ ರೈಫಲ್ಸ್ ತಂಡ ಅಚಬಲ್ ಪ್ರದೇಶದ ಬಿದೂರ ಗ್ರಾಮವನ್ನು ಸುತ್ತುವರಿದರು. ಆಗ ಅವಿತು ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಲಾರಂಭಿಸಿದರು.
ಎನ್ ಕೌಂಟರ್ ವೇಳೆ ಒಬ್ಬ ಮೇಜರ್ ಹುತಾತ್ಮರಾಗಿದ್ದು, ಮತ್ತೊಬ್ಬ ಮೇಜರ್ ಹಾಗೂ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಶ್ರೀನಗರದಲ್ಲಿರುವ ಸೇನೆಯ 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಗ್ರರ ನಿಖರ ಗುರುತು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.