

ಪಣಜಿ: ಗೋವಾದ ರಾಜಧಾನಿ ಪಣಜಿಯಲ್ಲಿ ಪರಿಸರ ಹೋರಾಟಗಾರರೊಂದಿಗೆ ಸರಣಿ ಸಭೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಮೀನುಗಾರಿಕೆ ಸಮುದಾಯದ ಪ್ರತಿನಿಧಿಗಳು ಹಾಗೂ ಗಣಿ ಉದ್ಯಮದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ರಾಹುಲ್ ಗಾಂಧಿ, ದೇಶ ಹಾಗೂ ರಾಜ್ಯಕ್ಕೆ ಒಗ್ಗೂಡಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೂಟ್ ಮಟ್ಟದ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರಫೆಲ್ ಕಡತ ನಾಪತ್ತೆ ಹಿಂದೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪಾತ್ರ ಕುರಿತಂತೆ ತನಿಖೆ ನಡೆಸುವಂತೆ ಒತ್ತಾಯಿಸಿದರು.
ರಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕಡತಗಳು ತಮ್ಮ ಬಳಿ ಇರುವುದಾಗಿ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದರು.