ವಿವಿಐಪಿ ಹೆಲಿಕಾಪ್ಟರ್ ಹಗರಣ: ಇಡಿಯಿಂದ ರಕ್ಷಣಾ ಏಜೆಂಟ್ ಬಂಧನ
ನವದೆಹಲಿ: 3600 ಕೋಟಿ ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಏಜೆಂಟ್ ಒಬ್ಬರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ತಡರಾತ್ರಿ ರಕ್ಷಣಾ ಏಜೆಂಟ್ ಸುಶೇನ್ ಮೋಹನ್ ಗುಪ್ತಾ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣ ಸೇರಿದಂತೆ ಅನೇಕ ರಕ್ಷಣಾ ವ್ಯವಹಾರಗಳಲ್ಲಿ ಗುಪ್ತಾ ಅವ್ಯವಹಾರ ನಡೆಸಿದ್ದು, ಅವರನ್ನು ಇಂದು ವಿಶೇಷ ಪಿಎಂಎಲ್ ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೇಲ್ ಹಾಗೂ ವಕೀಲ ಗೌತಮ್ ಖೈಥನ್ ಅವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿ ರಾಜೀವ್ ಸಕ್ಸೇನಾ ಹೇಳಿಕೆಯ ನಂತರ ಗುಪ್ತಾ ಪಾತ್ರದ ವಿಚಾರ ತಡವಾಗಿ ಬೆಳಕಿಗೆ ಬಂದಿತ್ತು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ವಿವಿಐಪಿ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದಂತೆ ಕೆಲ ಮಾಹಿತಿ ಗುಪ್ತಾ ಬಳಿ ಇದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ