ಮುಂಬೈ: ರೈತರ ಪರವಾಗಿ ಹಾಗೂ ಯಾರೂ ಭಯಭೀತರಾಗದಂತಹ ನಿರ್ಭೀತಿಯ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.
ಇಂದು ಸಂಜೆ 18ನೇ ಮುಖ್ಯಮಂತ್ರಿಯಾಗಿ ಛತ್ರಪತಿ ಶಿವಾಜಿ ಮಹಾರಾಜ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಉದ್ಧವ್ ಠಾಕ್ರೆ ಅವರು, ಶಿವಾಜಿ ರಾಜಧಾನಿ ರಾಯಗಢ ಕೋಟೆ ಅಭಿವೃದ್ಧಿಗೆ 20 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ರಾಯಗಢ ಅಭಿವೃದ್ಧಿಗೆ 20 ಕೋಟಿ ರೂಪಾಯಿ ಅನುದಾನ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.
ಮಹಾರಾಷ್ಟ್ರದಲ್ಲಿ ರೈತರ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ನಮ್ಮ ಮೈತ್ರಿ ಸರ್ಕಾರ ಆಡಳಿತ ನಡೆಸಲಿದೆ. ಮುಂಬರುವ ದಿನಗಳಲ್ಲಿ ರೈತಪರ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.
ಇನ್ನು, ಈಗಾಗ್ಲೆ ಘೋಷಿಸಿರುವ ಮೂರು ಪಕ್ಷಗಳ ಸಾಮಾನ್ಯ ಯೋಜನಾ ಪಟ್ಟಿಯಲ್ಲಿರುವ ಅಂಶಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಸೇರಿದಂತೆ ಆರು ಮಂದಿ ಸದಸ್ಯರ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಸಾಮಾನ್ಯ ಯೋಜನಾ ಪಟ್ಟಿಯಲ್ಲಿನ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದರು.
Advertisement