
ಹೈದರಾಬಾದ್: ಹೈದರಾಬಾದ್ ನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಮುತ್ತಿನ ನಗರಿಯಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.
ಕಳೆದ 100 ವರ್ಷಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸಂಜೆ ಸಹ ನಗರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವು ವಾಹನ ಸವಾರರು ರಸ್ತೆಯಲ್ಲೇ ಸಿಲುಕಿ ಪರದಾಡುತ್ತಿದ್ದು, ಹೈಟೆಕ್ ಸಿಟಿ ಹಾಗೂ ಗಜ್ಜಿಬೊಲಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ನದಿಯಂತಾಗಿವೆ. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ತಡವಾಗಿ ಕಚೇರಿ ಬಿಡುವಂತೆ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರು ಈ ಸಂಬಂಧ ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್ ಕೆ ಜೋಶಿ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿ ಪರಿಶೀಲಿಸುವಂತೆ ಸೂಚಿಸಿದ್ದಾರೆ.
ಸಿಕಿಂದರಾಬಾದ್ ಸಂಸದರಾಗಿರುವ ಕಿಶನ್ ರೆಡ್ಡಿ ಅವರು ಅಗತ್ಯಬಿದ್ದರೆ ಎನ್ ಡಿಆರ್ ಎಫ್ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಹೈದರಾಬಾದ್ ನಲ್ಲಿ ಮಂಗಳವಾರ ಒಂದೇ ದಿನ 13.2 ಸೆ.ಮೀ. ಮಳೆಯಾಗಿದೆ. ಇದು ಕಳೆದ 111 ವರ್ಷಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ. 1908ರಲ್ಲಿ 15.32 ಸೆ.ಮೀ. ಮಳೆಯಾಗಿತ್ತು. ಬಳಿಕ 2017ರಲ್ಲಿ 9 ಸೆ.ಮೀ. ಮಳೆಯಾಗಿತ್ತು ಎಂದು ಹವಾಮಾನ ಇಲಾಖೆ ನಿರ್ದೇಶಕ ವೈಕೆ ರೆಡ್ಡಿ ಅವರು ತಿಳಿಸಿದ್ದಾರೆ.
Advertisement