ಐಎನ್ಎಕ್ಸ್ ಹಗರಣ: ಶುಕ್ರವಾರ ಸುಪ್ರೀಂನಿಂದ ಚಿದಂಬರಂ ಜಾಮೀನು ಅರ್ಜಿ ವಿಚಾರಣೆ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ್ದ....
ಚಿದಂಬರಂ
ಚಿದಂಬರಂ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಶುಕ್ರವಾರ ನಿಗದಿಪಡಿಸಿದೆ.

ಚಿದಂಬರಂ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್ ವಿ ರಮಣ ಅವರು, ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಪೀಠಕ್ಕೆ ವರ್ಗಾಯಿಸಿದ್ದರು. ರಂಜನ್​ ಗೊಗೊಯ್​ ಅವರು ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಚಿದಂಬರಂ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ. ಹಾಗಾಗಿ ಚಿದಂಬರಂ ಅರ್ಜಿಯ ವಿಚಾರಣೆ ಶುಕ್ರವಾರಕ್ಕೆ ನಿಗದಿಪಡಿಸಲಾಗಿದೆ.

ಮೇಲ್ಮನವಿ ವಿಚಾರಣೆ ನಡೆಯುವವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನಿನ್ನೆಯಷ್ಟೇ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅವರು ಪಲಾಯನ ಮಾಡುವ, ಸಾಕ್ಷ್ಯಗಳನ್ನು ನಾಶಮಾಡುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ ಎಂದು ಚಿದಂಬರಂ ಪರ ವಕೀಲರು ಸ್ಪಷ್ಟಪಡಿಸಿದ್ದಾರೆ.

ಚಿದಂಬರಂ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕೃರಿಸಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಬಂಧನಕ್ಕಾಗಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಮನೆಯಲ್ಲಿ ಇಲ್ಲದ ಕಾರಣ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಿ ಎಂದು ಸಿಬಿಐ ಅಧಿಕಾರಿಗಳು ಅವರ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.

ನೊಟೀಸ್‌ನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಲಾಗಿದೆ. ಇದು ಯಾವ ಕಾನೂನಿನ ನಿಬಂಧನೆ ಅಡಿ ಇದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜಾಮೀನು ವಜಾಗೊಂಡ ಬೆನ್ನಲ್ಲೇ ಚಿದಂಬರಂ ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com