ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ: ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ- ಭಾರತೀಯ ಸೇನೆ 

ಪೌರತ್ವ ತಿದ್ದುಪಡಿ ಮಸೂದೆ 2019 ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹಬ್ಬುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ನಾಗರೀಕರಿಗೆ ಭಾರತೀಯ ಸೇನೆ ಮನವಿ ಮಾಡಿಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಗುವಾಹಟಿ: ಪೌರತ್ವ ತಿದ್ದುಪಡಿ ಮಸೂದೆ 2019 ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹಬ್ಬುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ನಾಗರೀಕರಿಗೆ ಭಾರತೀಯ ಸೇನೆ ಮನವಿ ಮಾಡಿಕೊಂಡಿದೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಭಾರತೀಯ ಸೇನೆ, ಸುಳ್ಳು ಸುದ್ದಿ ಹಾಗೂ ಪ್ರಚಾರಗಳನ್ನು ನಂಬದಿರಿ. ಕೆಲವರು ದುರುದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪಸರಿಸುತ್ತಿದ್ದಾರೆ. ಇಂತಹ ಸುದ್ದಿಗಳನ್ನು ನಂಬಬೇಡಿ ಎಂದು ವಿನಂತಿಸಿಕೊಂಡಿದೆ. 

ಅಸ್ಸಾಂ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹೆಚ್ಚುವರಿ ಸೇನಾಪಡೆಗಳನ್ನು ರವಾನಿಸಲಾಗಿದೆ. 

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ  ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019. 

ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. 

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ. 

ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ. 

ಎನ್ಆರ್'ಸಿಗೂ ಪೌರತ್ವ ತಿದ್ದುಪಡಿ ಮಸೂದೆಗೂ ವ್ಯತ್ಯಾಸವೇನು?
ಅಸ್ಸಾಂನಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರ ಪತ್ತೆಯಾಗಿ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್'ಸಿ)ಯನ್ನು ಜಾರಿ ಮಾಡಲಾಗಿತ್ತು. ಆದರ ಪ್ರಕಾರ ಅಲ್ಲಿನ ಜನರು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂ ನಿವಾಸಿಗಳೆಂದು ಸಾಬೀತುಪಡಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಂಡಿದ್ದು, 19 ಲಕ್ಷ ಜನರನ್ನು ಅಕ್ರಮ ವಲಸಿಗರೆಂದು ಗುರುತಿಸಲಾಗಿದೆ. ಆದರೆ, ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com