ಕಾಶ್ಮೀರಕ್ಕೆ ಟ್ರಂಪ್ ಮಧ್ಯಸ್ಥಿಕೆ: ಮೋದಿಯಿಂದ ದೇಶದ ಹಿತಾಸಕ್ತಿಗಳಿಗೆ ದ್ರೋಹ- ರಾಹುಲ್ ಗಾಂಧಿ

ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಭಾರತದಲ್ಲಿ ವ್ಯಾಪಕ ಕೋಲಾಹಲ ಸೃಷ್ಟಿ ಮಾಡಿದ್ದು, ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಭಾರತದಲ್ಲಿ ವ್ಯಾಪಕ ಕೋಲಾಹಲ ಸೃಷ್ಟಿ ಮಾಡಿದ್ದು, ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಕಾಶ್ಮೀರ ವಿಷಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೋರುವ ಮೂಲಕ ದೇಶದ ಹಿತಾಸಕ್ತಿಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ '1972 ರ ಭಾರತ ಪಾಕ್ ನಡುವಿನ ಶಿಮ್ಲಾ ಒಪ್ಪಂದದ ಆಶಯಗಳಿಗೂ ವಿರುದ್ಧವಾಗಿ ಪ್ರಧಾನಿ ಮೋದಿ ನಡೆದುಕೊಂಡಿದ್ದು, ತಮ್ಮ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಏನಾಗಿದೆ, ಯಾವ ಮಾತುಕತೆ ನಡೆದಿದೆ ಎಂಬುದನ್ನೂ ಪ್ರಧಾನಿ ದೇಶಕ್ಕೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ವಿದೇಶಾಂಗ ಇಲಾಖೆ ನೀಡಿರುವ ಸ್ಪಷ್ಟನೆ ಸಾಲದು. ದೇಶದ ಜನತೆಗೆ ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಬೇಕು. ಕಾಶ್ಮೀರ ವಿಚಾರದಲ್ಲಿ ಅವರು ಪಾರದರ್ಶಕವಾಗಿರಬೇಕು ಎಂದು ರಾಹುಲ್ ಆಗ್ರಹಿಸಿದ್ದಾರೆ.
ಇನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಅಮೆರಿಕ ಪ್ರವಾಸದ ವೇಳೆ ಅವರನ್ನು ಭೇಟಿ ಮಾಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, 'ಭಾರತ-ಪಾಕ್ ಒಪ್ಪಿದರೆ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ, ನಾನು ಸಹಾಯ ಮಾಡಬಹುದಾದರೆ, ಮಧ್ಯಸ್ಥಿಕೆ ವಹಿಸಲು ಇಚ್ಛಿಸುತ್ತೇನೆ ಎಂದು ಹೇಳಿದ್ದರು. ಅಲ್ಲದೆ ಈ ಹಿಂದಿನ ಭೇಟಿಯಲ್ಲಿ ಪ್ರಧಾನಿ ಮೋದಿ ಕೂಡ ಇದೇ ಪ್ರಸ್ತಾಪ ಮುಂದಿಟ್ಟಿದ್ದರು ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com