ಬಗೆಹರಿಯದ ಅಧಿಕಾರ ಹಂಚಿಕೆ ಬಿಕ್ಕಟ್ಟು: ಮಹಾ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ

ಮಹಾರಾಷ್ಟ್ರದಲ್ಲಿ ಶಿವಸೇನಾ-ಬಿಜೆಪಿ ನಡುವಿನ ಅಧಿಕಾರ ಹಂಚಿಕೆ ಬಿಕ್ಕಟ್ಟು ಮುಂದುವರಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿರುವ ಫಡ್ನವಿಸ್
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿರುವ ಫಡ್ನವಿಸ್

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ-ಬಿಜೆಪಿ ನಡುವಿನ ಅಧಿಕಾರ ಹಂಚಿಕೆ ಬಿಕ್ಕಟ್ಟು ಮುಂದುವರಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

13ನೇ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನಾಳೆ ಮುಕ್ತಾಯಗೊಳ್ಳಲಿದೆ. ಆದರೆ ಬಿಜೆಪಿ ಮತ್ತು ಶಿವಸೇನಾ ನಡುವೆ ಹಗ್ಗ ಜಗ್ಗಾಟ ನಡೆದಿರುವ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವಿಸ್ ಅವರು ಸರ್ಕಾರ ರಚನೆಯ ಹಕ್ಕು ಮಂಡಿಸುವ ಬದಲು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಫಡ್ನವಿಸ್ ಅವರು ತಮ್ಮ ಅಧಿಕಾರದ ಕೊನೆಯ ದಿನವಾದ ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಸೇರಿದಂತೆ ಯಾವೊಂದು ಪಕ್ಷಗಳು ಸರ್ಕಾರ ರಚನೆಗೆ ಹಕ್ಕು ಮಂಡಿಸದೆ ಇರುವುದರಿಂದ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆ ಇದೆ.

ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ದೇವೇಂದ್ರ ಫಡ್ನವೀಸ್ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಆದರೆ, ಮೈತ್ರಿಯೊಂದಿಗೆ ಸರ್ಕಾರ ರಚನೆ ಮಾಡುವ ಜನಾದೇಶ ನಮಗೆ ಸಿಕ್ಕಿದೆ. ಉದ್ಧವ್ ಠಾಕ್ರೆ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದಾರೆ. ಅವರ ಸಮ್ಮುಖದಲ್ಲಿ ಸಿಎಂ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಶಿವಸೇನೆ ಈಗ ಸಿಎಂ ಹಂಚಿಕೆ ಬೇಡಿಕೆ ಇಡುವ ಮೂಲಕ ಜನಾದೇಶಕ್ಕೆ ದ್ರೋಹ ಎಸಗಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಮತ್ತು ಶಿವಸೇನೆ ಮೈತ್ರಿಯೂ ಸರ್ಕಾರ ರಚನೆಗೆ ಬೇಕಾಗಿರುವ ಬಹುಮತವನ್ನು ಪಡೆದಿದ್ದರೂ ಶಿವಸೇನೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯ ಬೇಡಿಕೆ ಇಟ್ಟಿದೆ. ಆದರೆ, ಸಿಎಂ ಸ್ಥಾನವನ್ನು ಸುತಾರಾಂ ಬಿಟ್ಟುಕೊಡುವುದಿಲ್ಲ ಎಂದು ಬಿಜೆಪಿ ಪಟ್ಟುಹಿಡಿದಿರುವುದರಿಂದ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿದೆ. ಇನ್ನು ಕಾಂಗ್ರೆಸ್-ಎನ್​ಸಿಪಿ ಮೈತ್ರಿ ಕೂಡ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com