ಮಹಾ ಸರ್ಕಾರ ರಚನೆ ಬಗ್ಗೆ ಚರ್ಚಿಸಿಲ್ಲ: ಸೋನಿಯಾ ಭೇಟಿ ಬಳಿಕ ಶರದ್ ಪವಾರ್

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನಾ ಮೈತ್ರಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಜೊತೆ ಯಾವುದೇ ಚರ್ಚೆ ನಡೆಸಿಲ್ಲ...
ಶರದ್ ಪವಾರ್ - ಸೋನಿಯಾ ಗಾಂಧಿ
ಶರದ್ ಪವಾರ್ - ಸೋನಿಯಾ ಗಾಂಧಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನಾ ಮೈತ್ರಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಜೊತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಸಂಜೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷೆಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರು, ಸರ್ಕಾರ ರಚನೆ ಬಗ್ಗೆ ನಾವು ಯಾವುದೇ ಚರ್ಚೆ ನಡೆಸಿಲ್ಲ. ಆದರೆ ಮಹಾರಾಷ್ಟ್ರ ರಾಜಕೀಯದ ಬಗ್ಗೆ ಮತ್ತು ಸಂಖ್ಯಾಬಲದ ಕುರಿತು ಚರ್ಚಿಸಿದ್ದೇವೆ ಎಂದರು.

ನಾವು ಮಹಾರಾಷ್ಟ್ರ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತೇವೆ. ಎರಡೂ ಪಕ್ಷಗಳ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಶರದ್ ಪವಾರ್ ಹೇಳಿದ್ದಾರೆ.

ಇದಕ್ಕು ಮುನ್ನ ಸಂಸತ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶರದ್ ಪವಾರ್ ಅವರು, ಬಿಜೆಪಿ ಮತ್ತು ಶಿವಸೇನಾ ವಿಧಾನಸಭೆ ಚುನಾವಣೆಯಲ್ಲಿ ಜತೆಯಾಗಿ ಸ್ಪರ್ಧಿಸಿದ್ದು, ತಮ್ಮ ದಾರಿ ನೋಡಿಕೊಳ್ಳಲಿ ಎಂದು ಹೇಳಿದ್ದರು. ಅಲ್ಲದೆ ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚನೆ ಕುರಿತು ಚರ್ಚಿಸುವುದಾಗಿ ತಿಳಿಸಿದ್ದರು.

ಇನ್ನು ಶರದ್ ಪವಾರ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಮಹಾರಾಷ್ಚ್ರ ರಾಜಕೀಯ ಕುರಿತು ಚರ್ಚಿಸಿದ್ದಾರೆ. ಒಂದೇರಡು ದಿನದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ ಮುಖಂಡರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲ ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com