ಡಿಕೆ ಶಿವಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.
Published: 17th September 2019 05:53 PM | Last Updated: 17th September 2019 06:34 PM | A+A A-

ಡಿಕೆ ಶಿವಕುಮಾರ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಅಕ್ಟೋಬರ್ 1ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಅಲ್ಲದೆ ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.
ಡಿಕೆ ಶಿವಕುಮಾರ್ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಿದರು.
ಇದೇ ವೇಳೆ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಅಲ್ಲದೆ 14 ದಿನಗಳ ಕಾಲ ಡಿಕೆಶಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ನ್ಯಾಯಾಧೀಶರು ಆದೇಶ ನೀಡಿದರು. ಆದರೆ, ಅನಾರೋಗ್ಯದಿಂದ ಬಳಲುತ್ತಿರುವ ಡಿಕೆಶಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ.
ಈ ಮಧ್ಯೆ ಡಿಕೆ ಶಿವಕುಮಾರ್ ಅವರನ್ನು ಜೈಲಿನ ಬದಲು ಆಸ್ಪತ್ರೆಯಲ್ಲಿ ಇರಿಸುವಂತೆ ಡಿಕೆಶಿ ಪರ ವಕೀಲರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶರು, ಡಿಕೆ ಶಿವಕುಮಾರ್ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಸೂಚಿಸಿದರು.
ವೈದ್ಯರು ತಪಾಸಣೆ ನಡೆಸಿದ ಬಳಿಕ ಅವರನ್ನು ಆಸ್ಪತ್ರೆಯಲ್ಲೇ ಇರಿಸಬೇಕಾ ಅಥವಾ ಜೈಲಿಗೆ ಕಳುಹಿಸಬೇಕಾ ಎಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಬುಧವಾರದವರೆಗೆ ಕೋರ್ಟ್ ಆದೇಶ ಪಾಲಿಸುವಂತೆ ಸೂಚಿಸಲಾಗಿದೆ.
ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ ವಾದ ಮಂಡಿಸಿದರು.
ಜಾರಿ ನಿರ್ದೇಶನಾಲಯ ಪರ ವಕೀಲರಾದ ನಟರಾಜ್ ಪ್ರತಿವಾದ ಮಂಡಿಸಿ, ಡಿಕೆ ಶಿವಕುಮಾರ್‌ಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ವಿಚಾರಣೆ ನಡೆಸಬೇಕಾಗಿದೆ. ಈಗಾಗಲೇ ಇಬ್ಬರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರನ್ನು ಕರೆಸಿ ಮುಖಾಮುಖಿ ವಿಚಾರಣೆ ನಡೆಸಲಾಗುತ್ತದೆ. ಹೀಗಾಗಿ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.