

ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೊಪೌರ್'ನಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಭಯೋತ್ಪಾದನಾ ಸಂಘಟನೆಗೆ ಸೇರಿದ್ದ ಐವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ತುಜಾರ್ ಗ್ರಾಮದಲ್ಲಿ ನಾಗರೀಕ ಪ್ರದೇಶಗಳ ಮೇಲೆ ನಡೆದಿದ್ದ ಗ್ರೆನೇಡ್ ದಾಳಿಯಲ್ಲಿ ಈ ಐವರೂ ಉಗ್ರರು ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದೆ.
ಸೊಪೋರ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾ ಪಡೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. ಇದರಂತೆ ಐವರು ಉಗ್ರರನ್ನು ಬಂಧಿಸಿದ್ದಾರೆಂದು ವರದಿಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಸೇನಾಪಡೆ 5 ಹ್ಯಾಂಡ್ ಮೇಡ್ ಗ್ರೆನೇಡ್ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.