ಎಲ್ಲ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.

ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್‌ ಬ್ಯಾಂಕ್‌ ಅಡಿಯಲ್ಲಿ ತರುವ ಕುರಿತು ಈ ಹಿಂದೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಕುರಿತಂತೆ ನಡೆದಿದ್ದ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಬಳಿಕ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ  ಹಾಕಿದ್ದಾರೆ.

ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ – 2020 ಈ ವರ್ಷದ ಬಜೆಟ್‌ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕೋವಿಡ್‌ 19ನಿಂದಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್‌ ಆಗಿರಲಿಲ್ಲ. ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತವನ್ನು ಕಾಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿತ್ತು.

ಕಳೆದ ವರ್ಷ ಪಂಜಾಬ್ ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವುರ ಆರ್‌ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕುಗಳು ತರಲಾಗುವುದು ಎಂದು ತಿಳಿಸಿದ್ದರು. 

ಇತ್ತೀಚೆಗಷ್ಟೇ ಕರ್ನಾಟಕದಲ್ಲೂ ಇಂತಹುದೇ ಹಗರಣ ಕೇಳಿಬಂದಿತ್ತು. ಬೆಂಗಳೂರಿನ ಗುರು ರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲೂ ಇತ್ತೀಚೆಗೆ ಹಗರಣ ನಡೆದಿದ್ದು, ಆರ್‌ಬಿಐ ಈ ಬ್ಯಾಂಕ್‌ನ ವ್ಯವಹಾರದ ಮೇಲೆ ನಿರ್ಬಂಧಗಳನ್ನು ವಿಧಿಸಿ ತನಿಖೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com