ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಂಭವ: ಆಗಸ್ಟ್ ನಲ್ಲಿ ದೇಶದಲ್ಲಿ ದಾಖಲೆ ಮಳೆ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದಹಲಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್-೧ ರಿಂದ ಆಗಸ್ಟ್ ೩೧ರ ಅವಧಿಯಲ್ಲಿ ದೇಶದಲ್ಲಿ ಒಟ್ಟಾರೆ ಶೇ. ೧೦ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಆಗಸ್ಟ್‌ನಲ್ಲಿ ವಾಡಿಕೆಗಿಂತ ಶೇಕಡ ೨೭ರಷ್ಟು ಹೆಚ್ಚು ಮಳೆಯಾಗಿದೆ. ಈ ಮೂಲಕ ೪೪ ವರ್ಷಗಳ ದಾಖಲೆಯನ್ನು ಆಗಸ್ಟ್ ಮಳೆ ಮುರಿದಿದೆ.

ಕಳೆದ ೧೨೦ ವರ್ಷಗಳಲ್ಲಿ ೪ನೇ ಬಾರಿಗೆ ಆಗಸ್ಟ್‌ನಲ್ಲಿ ಅತಿ ಹೆಚ್ಚು ಮಳೆಯಾಗಿರುವುದು ವಿಶೇಷವಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ೩ ದಿನಗಳ ಕಾಲ ಉತ್ತರ ಭಾರತ, ಈಶಾನ್ಯ ರಾಜ್ಯಗಳು ಹಾಗೂ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಂಭವವಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ನಲ್ಲಿ ಇಷ್ಟೊಂದು ಮಳೆ ಬಿದ್ದಿರುವುದು 1976ರ ಬಳಿಕ ಇದೇ ಮೊದಲು ಎಂದು ಇಲಾಖೆ ಹೇಳಿದೆ. ಜುಲೈ ತಿಂಗಳಲ್ಲಿ ಸರಾಸರಿಗಿಂತ ಶೇ.10ರಷ್ಟು ಕಡಿಮೆ ಮಳೆಯಾಗಿತ್ತು. ಆದರೆ, ಆಗಸ್ಟ್‌ನಲ್ಲಿ ದೇಶಾದ್ಯಂತ ಉತ್ತಮ ಮಳೆಯಾದ ಕಾರಣ, ಈ ದಾಖಲೆ ಸೃಷ್ಟಿಯಾಗಿದೆ. ಸೆಪ್ಟಂಬರ್‌ನಲ್ಲಿ ವರುಣನ ಅಬ್ಬರ ತಗ್ಗಲಿದೆ ಎಂದೂ ಇಲಾಖೆ ಹೇಳಿದೆ.

ಕಳೆದ ಎರಡು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಬೆಂಗಳೂರು, ರಾಮನಗರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆ.5ರ ವರೆಗೂ ಕರಾವಳಿ, ದಕ್ಷಿಣ ಒಳನಾಡಿನ ಹಾಗೂ ರಾಜ್ಯದ ಪೂರ್ವಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್. ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com