ನವದೆಹಲಿ: ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.
ನಿಷ್ಟಾವಂತ ಕಾರ್ಯಕರ್ತರಾಗಿದ್ದ ಸುರೇಶ್ ಅಂಗಡಿ, ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುವಲ್ಲಿ ಶ್ರಮ ವಹಿಸಿದ್ದರು. ಅವರು ದಕ್ಷ ಸಂಸದ ಹಾಗೂ ಪರಿಣಾಮಕಾರಿ ಸಚಿವರಾಗಿದ್ದರು. ಅವರ ನಿಧನದಿಂದ ತುಂಬಾ ದು:ಖವಾಗಿದ್ದು, ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸಂತಾಪ ಸೂಚಿಸುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸ್ನೇಹಜೀವಿಯಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ಆಘಾತಕಾರಿಯಾದದ್ದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುರೇಶ್ ಅಂಗಡಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
Advertisement