ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?

ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ....
ಅಮಿತ್ ಶಾ - ಬಿಎಸ್ ಯಡಿಯೂರಪ್ಪ
ಅಮಿತ್ ಶಾ - ಬಿಎಸ್ ಯಡಿಯೂರಪ್ಪ

ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರಕಾರಿ ಒಡೆತನದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನುರಿತ ವೈದ್ಯರುಗಳ ತಂಡ ಅಲ್ಲಿಗೆ ಭೇಟಿ ನೀಡಲಿದೆ ಎಂಬ ಸುದ್ದಿಯೂ ಹಬ್ಬಿದೆ. 

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೆ ರೀತಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರೂ ಖಾಸಗಿ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ತಿಂಗಳು ಕೋವಿಡ್ ಚಿಕಿತ್ಸೆಗೆ ದಾಖಲಾಗಿದ್ದ ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಮೊದಲು ದೆಹಲಿ ಸರಕಾರದ ಒಡೆತನದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ನಂತರ ಅವರು ಪ್ಲಾಸ್ಮಾ ಥೆರಪಿಗಾಗಿ ಮ್ಯಾಕ್ಸ್ ಆಸ್ಪತೆಗೆ ದಾಖಲಾಗಿದ್ದರು. 

ಕೊರೋನಾ ಸೋಂಕು ತಗುಲಿರುವ ತಮಿಳುನಾಡಿನ ಅನೇಕ ಸಚಿವರು ಕೂಡ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಹ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಕಾರಣಿಗಳು ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಆಕ್ರೋಶ ವ್ಯಕ್ತವಾಗಿದೆ. ಇವರಿಗೆ ಸರಕಾರದ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲದೆ ಹೋದರೆ ಬೇರೆಯವರಿಗೆ ನಂಬಿಕೆ ಬರುವುದಾದರೂ ಹೇಗೆ ಎಂಬ ಪ್ರಶ್ನೆಗಳು ಹಲವು ಕಡಯಿಂದ ತೂರಿಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com