ಇಡೀ ದೇಶದ ಜನತೆಗೆ ಕೊರೋನಾ ಲಸಿಕೆ ನೀಡುತ್ತೇವೆಂದು ಹೇಳಿಯೇ ಇಲ್ಲ: ಉಲ್ಟಾ ಹೊಡೆದ ಕೇಂದ್ರ ಸರ್ಕಾರ!

ಕೊರೋನಾ ಲಸಿಕೆ ಬಂದ ನಂತರ ದೇಶದ ಎಲ್ಲ ಜನರಿಗೆ ಲಸಿಕೆ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಜನರಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶಾಕ್ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೊರೋನಾ ಲಸಿಕೆ ಬಂದ ನಂತರ ದೇಶದ ಎಲ್ಲ ಜನರಿಗೆ ಲಸಿಕೆ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಜನರಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶಾಕ್ ನೀಡಿದೆ.

ದೇಶದ ಎಲ್ಲ ಜನರಿಗೆ ಕರೋನಾ ಲಸಿಕೆ ಕೊಡುವುದಾಗಿ ಕೇಂದ್ರ ಸರ್ಕಾರ ಎಲ್ಲಿಯೂ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್, "ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕೆ ಹೊರತು ಒಟ್ಟಾರೆಯಾಗಿ ಮಾತನಾಡಬಾರದು” ಎಂದು ಹೇಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.

ಕೇಂದ್ರ ಸರ್ಕಾರ ದೇಶದ ಎಲ್ಲ ಜನರಿಗೂ ಲಸಿಕೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಗತ್ತಿನ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪ್ರಮಾಣ ಮತ್ತು ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಇದೇ ಪ್ರಮಾಣ ಕಾಯ್ದುಕೊಳ್ಳುವ ಮೂಲಕ ಸೋಂಕು ಮತ್ತಷ್ಟು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.

ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಬಿಜೆಪಿ ನಾಯಕರು ತಾವು ಗೆದ್ದರೆ ಇಡೀ ಬಿಹಾರಕ್ಕೆ ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಘೋಷಣೆ ಮಾಡಿತ್ತು. ಈ ಘೋಷಣೆಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಿಗೆ ಮತ್ತೊಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕರು ಇಡೀ ದೇಶಕ್ಕೆ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಇದೀಗ ಉಲ್ಟಾ ಹೊಡೆದಿರುವ ಕೇಂದ್ರ ಆರೋಗ್ಯ ಇಲಾಖೆ, " ಕೊರೋನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಇಡೀ ದೇಶದ ಜನರಿಗೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಿಯೇ ಇಲ್ಲ" ಎಂದು ಹೇಳುವ ಮೂಲಕ ಜನರಿಗೆ ಉಚಿತ ಲಸಿಕೆ ನೀಡುವ ಭರವಸೆಗೆ ಉಲ್ಟಾ ಹೊಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com