ರೈತರಿಂದ ದಿನವೀಡಿ ಉಪವಾಸ ಸತ್ಯಾಗ್ರಹ, ಕೃಷಿ ಕ್ಷೇತ್ರಕ್ಕೆ ಹಾನಿಯಾಗುವಂತಹ ಕ್ರಮ ಇಲ್ಲ ಎಂದ ಸರ್ಕಾರ

ಕೇಂದ್ರ ಸರ್ಕಾರ ಇತ್ತಿಚೀಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಸೋಮವಾರ ದೇಶಾದ್ಯಂತ ದಿನವೀಡಿ ಉಪವಾಸ ಸತ್ಯಾಗ್ರಹ ನಡೆಸಿದರೆ...
ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರ ಇತ್ತಿಚೀಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಸೋಮವಾರ ದೇಶಾದ್ಯಂತ ದಿನವೀಡಿ ಉಪವಾಸ ಸತ್ಯಾಗ್ರಹ ನಡೆಸಿದರೆ, ಕೃಷಿ ಕ್ಷೇತ್ರಕ್ಕೆ ಹಾನಿಯಾಗುವಂತಹ ಯಾವುದೇ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿದೆ.

ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಸೋಮವಾರ 19ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಪವಾಸ ಸತ್ಯಾಗ್ರಹ ನಡೆಸಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಹ ಉಪವಾಸ ಮಾಡುವ ಮೂಲಕ ರೈತರಿಗೆ ಸಾಥ್ ನೀಡಿದರು.

ಕೃಷಿ ಕಾನೂನುಗಳ ಬಗ್ಗೆ ರೈತರೊಂದಿಗೆ ಮುಕ್ತ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಕೃಷಿ ಕ್ಷೇತ್ರಕ್ಕೆ ಹಾನಿಯಾಗುವಂತಹ ಯಾವುದೇ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಹೇಳಿದ್ದಾರೆ.

ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳದ 93ನೇ ವಾರ್ಷಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಅಭ್ಯುದಯಕ್ಕಾಗಿ ನೂತನ ಕೃಷಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದರು.

ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಭಾರತ ವಿಶ್ವವೇ ಮೆಚ್ಚುವಂತೆ ಕಾರ್ಯನಿರ್ವಹಿಸಿದೆ. ಅನೇಕ ಸಂಘ-ಸಂಸ್ಥೆಗಳು ಸಂಕಷ್ಟದಲ್ಲಿರುವ ಜನರಿಗೆ ಆಹಾರ ವಿತರಿಸಿವೆ. ಸೋಂಕು ಹರಡುವುದನ್ನು ತಡೆಯುವಲ್ಲಿ ವೈದ್ಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅಮೋಘವಾಗಿ ಕೆಲಸ ಮಾಡಿದರು ಎಂದು ಶ್ಲಾಘಿಸಿದರು.

ಕೋವಿಡ್-19 ಸನ್ನಿವೇಶದಲ್ಲಿ ಪಿಪಿಇ ಕಿಟ್, ಮಾಸ್ಕ್, ಮೂಲಸೌಕರ್ಯಗಳು, ಐಸಿಯು ಹಾಸಿಗೆಗಳನ್ನು ತ್ವರಿತವಾಗಿ ನಿರ್ಮಿಸುವ ಸವಾಲು ಭಾರತದ ಮುಂದಿತ್ತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಲಾಯಿತು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com