20 ದಿನಗಳ ಹಿಂದೆಯೇ ಆಪ್ ಶಾಸಕ ನರೇಶ್ ಯಾದವ್ ಹತ್ಯೆಗೆ ಸಂಚು: ದೆಹಲಿ ಪೊಲೀಸರು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿರುವ ಸಮಯದಲ್ಲಿಯೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ನರೇಶ್ ಯಾದವ್
ನರೇಶ್ ಯಾದವ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿರುವ ಸಮಯದಲ್ಲಿಯೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮೆಹರೌಲಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಆಪ್ ಶಾಸಕ ನರೇಶ್ ಯಾದವ್ ಅವರ ಹತ್ಯೆಗೆ 20 ದಿನಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು. ಆದರೆ ಚುನಾವಣಾ ಪ್ರಚಾರದಲ್ಲಿರುತ್ತಿದ್ದ ಯಾದವ್ ಸುತ್ತ ಅವರ ಬೆಂಬಲಿಗರು ಸುತ್ತುವರಿದಿರುತ್ತಿದ್ದರಿಂದ ಮತ್ತು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರಿಂದ ಸಂಚು ವಿಫಲವಾಗಿತ್ತು. ಅದರ ಮುಂದುವರಿದ ಭಾಗವಾಗಿ ಇಂದು ಗುಂಡಿನ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇದು ಗ್ಯಾಂಗ್ ವಾರ್ ಅಲ್ಲ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಸಾಧ್ಯತೆ ಇದೆ. ಆದಾಗ್ಯೂ ತನಿಖೆ ಪೂರ್ಣಗೊಳ್ಳುವವರೆಗೆ ಈ ಬಗ್ಗೆ ಏನು ಹೇಳಲು ಬರುವುದಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ಹೆಚ್ಚುವರಿ ಪೊಲೀಸ್ ಆಯುಕ್ತರೊಬ್ಬರು ಐಎಎನ್ಎಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಯಾದವ್ ಅವರು ತಮ್ಮ ಬೆಂಬಲಿಗರೊಂದಿಗೆ ತಮ್ಮ ಕ್ಷೇತ್ರದಲ್ಲಿರುವ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ ಹಿಂದಿರುಗುತ್ತಿದ್ದರು. ಈ ವೇಳೆ ನೈಋತ್ಯ ದೆಹಲಿಯ ಕೃಷ್ಣಾಗಡ್ ಗ್ರಾಮದಲ್ಲಿ ಶಾಸಕರು ಸಂಚರಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು 7 ಸುತ್ತು ಗುಂಡು ಹಾರಿಸಿದ್ದಾರೆ. 

ಪರಿಣಾಮ ದಾಳಿಯಲ್ಲಿ ಓರ್ವ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಪಕ್ಷದ ಕಾರ್ಯಕರ್ತ ಅಶೋಕ್ ಮನ್ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com