ಹತ್ರಾಸ್ ಅತ್ಯಾಚಾರ ಪ್ರಕರಣದ ಸಿಬಿಐ ತನಿಖೆ ಅತ್ಯಗತ್ಯ; ಅಪಪ್ರಚಾರ ನಡೆಯುತ್ತಿದೆ: 'ಸುಪ್ರೀಂ'ಗೆ ಯೋಗಿ ಸರ್ಕಾರ
ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ.
Published: 06th October 2020 01:46 PM | Last Updated: 06th October 2020 01:57 PM | A+A A-

ಹತ್ರಾಸ್ ಘಟನೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಎಐಎಸ್ಎ ಮತ್ತು ಸಮಾಜವಾದಿ ಪಕ್ಷದ ಕಾರ್ಯಕರ್ತರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿರುವುದು.
ನವದೆಹಲಿ: ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ.
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿಯನ್ನು ಇಂದು ಸಿಜೆಐ ಎಸ್.ಎ. ಬೊಬ್ಡೆ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.
ಪ್ರಕರಣವನ್ನು ಸ್ವತಂತ್ರ ಕೇಂದ್ರ ಸಂಸ್ಥೆ ತನಿಖೆ ನಡೆಸುವುದು ಅತ್ಯಗತ್ಯವಿದೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ತಿಳಿಸಿದೆ.
ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಉಂಟಾಗುವ ಅಡಚಣೆಗಳನ್ನು ದೂರಾಗಿಸುವ ಸಲುವಾಗಿ ಸಿಬಿಐ ತನಿಖೆ ನಡೆಸಲು ಅನುಮತಿ ನೀಡುವಂತೆ ಕೇಂದ್ರಕ್ಕೆ ಈಗಾಗಲೇ ಮನವಿ ಮಾಡಲಾಗಿದೆ. ಸಿಬಿಐ ತನಿಖೆ ನಡೆಸುವುದರಿಂದ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಉದ್ದೇಶ, ಲಾಭಗಳೊಂದಿಗೆ ನಕಲಿ ಮತ್ತು ಸುಳ್ಳು ನಿರೂಪಣೆಯನ್ನು ರಚಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ.