ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ವರದಿ ಸಲ್ಲಿಸಲು ಎಸ್ಐಟಿಗೆ ಹೆಚ್ಚುವರಿ 10 ದಿನ ಕಾಲಾವಕಾಶ ನೀಡಿದ ಯೋಗಿ ಸರ್ಕಾರ
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶವನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ನೀಡಿದೆ.
Published: 07th October 2020 11:13 AM | Last Updated: 07th October 2020 11:13 AM | A+A A-

ಸಂಗ್ರಹ ಚಿತ್ರ
ಲಖನೌ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶವನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ನೀಡಿದೆ.
ಹತ್ರಾಸ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದ್ದರು. 7 ದಿನಗಳಲ್ಲಿ ಪ್ರಕರಣ ಸಂಬಂಧ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದರು. ಇದರಂತೆ ಇಂದು ಎಸ್ಐಟಿ ವರದಿ ಸಲ್ಲಿಸಬೇಕಿತ್ತು.
ಈ ಸಂಬಂಧ ಹೇಳಿಕೆ ನೀಡಿರುವ ಉತ್ತರಪ್ರದೇಶ ರಾಜ್ಯದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಕೆ ಅವಸ್ಥಿಯವರು, ಹತ್ರಾಸ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್ಐಟಿ ದಳಕ್ಕೆ ವರದಿ ಸಲ್ಲಿಸಲು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಈ ಹಿಂದಿನ ಆದೇಶದಂತೆ ತನಿಖಾ ದಳ ಇಂದು ವರದಿ ಸಲ್ಲಿಸಬೇಕಿತ್ತು. ಆದರೆ, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ತಂಡದ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಎಸ್ಐಟಿ ಅಧಿಕಾರಿಗಳು ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದ್ದು, ವರದಿ ಆಧರಿಸಿ ಮುಖ್ಯಮಂತ್ರಿಗಳು ಹತ್ರಾಸ್ ಎಸ್'ಪಿ, ಡಿಎಸ್'ಪಿ ಹಾಗೂ ಇತರೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆಂದು ತಿಳಿದುಬಂದಿದೆ.
2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಗ್ಯಾಂಗ್ರೇಪ್ ಮಾದರಿಯಲ್ಲೇ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದ್ದು, ಸೆ. 14ರಂದು ಯುವತಿಯು ತಮ್ಮ ಜಮೀನಿನಲ್ಲಿ ತಾಯಿಯೊಂದಿಗೆ ಮೇವು ತರಲು ಹೋಗಿದ್ದಾಗ ನಾಲ್ವರು ಕಾಮುಕರು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, ಆಕೆಯ ನಾಲಿಗೆಯನ್ನು ಕತ್ತರಿಸಿದ್ದಾರೆ. ಆಕೆಯ ಬೆನ್ನುಮೂಳೆ ಮತ್ತು ಕುತ್ತಿಗೆಗೆ ಹಾನಿ ಮಾಡಿದ್ದಾರೆ. ಗಂಭೀರ ಗಾಯಗಳಿಂದ ದೆಹಲಿಯ ಸಫ್ದಾರ್ ಜಂಗ್ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.