
ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇಂದು ಪುನರಾರಂಭಗೊಂಡ ನಂತರ ಸ್ಥಳದಿಂದ ಇನ್ನೂ ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ ಎಂದು ಕಿನ್ನೌರ್ ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಈವರೆಗೆ 14 ಶವಗಳನ್ನು ಪತ್ತೆ ಮಾಡಲಾಗಿದೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಭೂಕುಸಿತದ ನಂತರ ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಅವರು ಹೇಳಿದ್ದಾರೆ.
ಆದಾಗ್ಯೂ, ಒಂದು ಬೊಲೆರೊ ಕಾರನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್), ಐಟಿಬಿಪಿ ಮತ್ತು ಸ್ಥಳೀಯ ಪೊಲೀಸ್ ಹಾಗೂ ಗೃಹರಕ್ಷಕ ದಳದ ಸದಸ್ಯರು ಜಂಟಿಯಾಗಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ಇಂದು ಬೆಳಗ್ಗೆ 6 ಗಂಟೆಗೆ ಪುನರಾರಂಭವಾಯಿತು ಎಂದು ಮೊಕ್ತಾ ಹೇಳಿದ್ದಾರೆ.
Advertisement