ಉದ್ಧವ್ ಕಪಾಳಕ್ಕೆ ಬಾರಿಸುತ್ತಿದ್ದೆ ಹೇಳಿಕೆ: ರಾಣೆಗೆ ಸಮನ್ಸ್; ಲೋಕಸಭಾ ಸ್ಪೀಕರ್ ಭೇಟಿಗೆ ಬಿಜೆಪಿ ನಿರ್ಧಾರ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಅವರಿಗೆ ನಾಶಿಕ್ ಪೊಲೀಸರು ಬುಧವಾರ ನೋಟಿಸ್ ನೀಡಿದ್ದಾರೆ.
ನಾರಾಯಣ ರಾಣೆ
ನಾರಾಯಣ ರಾಣೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ನಾಶಿಕ್ ಪೊಲೀಸರು ಬುಧವಾರ ನೋಟಿಸ್ ನೀಡಿದ್ದಾರೆ.

ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ನಾಶಿಕ್ ನಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಸಂಬಂಧ ಸೆಪ್ಟೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ರಾಣೆ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಮಹಾ ಸಿಎಂ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಶಿವಸೇನಾ ಮುಖಂಡರು ನಾಶಿಕ್ ಮತ್ತು ಪುಣೆ ಸೇರಿದಂತೆ ಹಲವು ಕಡೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಎಫ್ಐಆರ್ ಗಳನ್ನು ದಾಖಲಿಸಲಾಗಿದೆ ಮತ್ತು ಈ ಸಂಬಂಧ ನಿನ್ನೆ ರತ್ನಗಿರಿ ಪೊಲೀಸರು ರಾಣೆ ಅವರನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಕೇಂದ್ರ ಸಚಿವ ರಾಣೆ ಬಂಧನವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಬಿಜೆಪಿ ನಾಯಕರು ಖಂಡಿಸಿದ್ದು, ಮಹಾರಾಷ್ಟ್ರ ಪೊಲೀಸರನ್ನು ರಾಣೆ ಅವರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಸಂಬಂಧ ಬಿಜೆಪಿ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ ಸಂಸದರು ಲೋಕಸಭಾ ಸ್ಪೀಕರ್‌ ಬಿರ್ಲಾ ಅವರನ್ನು ಭೇಟಿ ಮಾಡಿ, ರಾಣೆ ಅವರ ಹಕ್ಕುಗಳ ಉಲ್ಲಂಘನೆ ಕುರಿತು ದೂರು ಸಲ್ಲಿಸಲಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಹೇಳಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com