ಒಬಿಸಿ ಮೀಸಲಾತಿ ಬಗ್ಗೆ ಒಂದು ವಾರದಲ್ಲಿ ನಿರ್ಧಾರ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ
ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಮೀಸಲಾತಿಯನ್ನು ಮರುಸ್ಥಾಪಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಪ್ಪಿಕೊಂಡಿದ್ದು, ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶುಕ್ರವಾರ ಹೇಳಿದ್ದಾರೆ.
ಇಲ್ಲಿನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಈ ಕುರಿತು ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಮಹಾ ಸಿಎಂ, ಮುಂದಿನ ಶುಕ್ರವಾರ ಇನ್ನೊಂದು ಸಭೆ ನಡೆಯಲಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನ ಈ ಹಿಂದಿನ ನಿಬಂಧನೆಯನ್ನು ಓದಿದ ನಂತರ ಮಹಾರಾಷ್ಟ್ರದಲ್ಲಿ ಒಬಿಸಿಗಳಿಗೆ ರಾಜಕೀಯ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. "ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಕೋಟಾವನ್ನು ಮರುಸ್ಥಾಪಿಸಲು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ ಎಂದರು.
ರಾಜ್ಯ ಸರ್ಕಾರವು ವಿವಿಧ ರಾಜಕೀಯ ಪಕ್ಷಗಳು ನೀಡಿದ ಸಲಹೆಗಳನ್ನು ಅಧ್ಯಯನ ಮಾಡುತ್ತದೆ. ಮೀಸಲಾತಿ ಮರುಸ್ಥಾಪನೆಯಾಗುವವರೆಗೂ ಅವರೆಲ್ಲರೂ ಚುನಾವಣೆ ನಡೆಸುವುದನ್ನು ವಿರೋಧಿಸಿದ್ದಾರೆ" ಎಂದು ಠಾಕ್ರೆ ಹೇಳಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
"ಮುಂದಿನ ಸಭೆ ಮುಂದಿನ ಶುಕ್ರವಾರ(ಸೆಪ್ಟೆಂಬರ್ 3) ನಡೆಯಲಿದ್ದು, ಆ ವೇಳೆಗೆ ನಾವು ಕೆಲವು ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ