ಮೂರು ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ

ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ. 
ದೇಶವನ್ನುದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
ದೇಶವನ್ನುದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
Updated on

ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು (Farmers law) ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ. 

ಇಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi), 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು. ಈ ತಿಂಗಳ ಅಂತ್ಯದಲ್ಲಿ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿಯೇ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಕಟಿಸಿದ್ದಾರೆ. 

ಇಂದು ಗುರುನಾನಕ್ ಜಯಂತಿಯಂದು ದೇಶವಾಸಿಗಳ ಮುಂದೆ ರೈತ ಮಸೂದೆಗಳನ್ನು ವಾಪಸ್ ಮಾಡುವ ನಿರ್ಧಾರ ಪ್ರಕಟಿಸುತ್ತಿದ್ದೇನೆ, ರೈತರು ಪ್ರತಿಭಟನೆ ಕೈಬಿಟ್ಟು ತಮ್ಮ ಮನೆಗಳಿಗೆ ತೆರಳುವಂತೆ ಮನವಿ ಮಾಡಿಕೊಂಡರು. ಈ ಕೃಷಿ ಕಾನೂನುಗಳನ್ನು ಹಿಂಪಡೆಯಲು ನಾವು ಸಾಂವಿಧಾನಿಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮೂರು ಕೃಷಿ ಕಾನೂನುಗಳ ಗುರಿ ರೈತರನ್ನು, ವಿಶೇಷವಾಗಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವುದಾಗಿತ್ತು. ಮೂರು ಕಾನೂನುಗಳು ರೈತರ ಪ್ರಯೋಜನಕ್ಕಾಗಿವೆಯಾದರೂ ಒಂದು ವರ್ಗದ ರೈತರ ಮನವೊಲಿಸಲು ನಮಗೆ ಸಾಧ್ಯವಾಗಲಿಲ್ಲ ಎಂದು ಇಂದು ಘೋಷಣೆ ಮಾಡುವ ಸಂದರ್ಭದಲ್ಲಿ ಪ್ರಧಾನಿ ಹೇಳಿದರು. 

2014ರಿಂದ ನಮ್ಮ ಸರ್ಕಾರದಲ್ಲಿ ಕೃಷಿ ಬಜೆಟ್ 5 ಪಟ್ಟು ಏರಿಕೆಯಾಗಿದ್ದು, ವಾರ್ಷಿಕ 1.25 ಲಕ್ಷ ಕೋಟಿ ರೂಪಾಯಿಗಳನ್ನು ಕೃಷಿಗೆ, ರೈತರ ಒಳಿತಿಗೆ ಖರ್ಚು ಮಾಡಿದ್ದೇವೆ. ನನ್ನ ಐದು ದಶಕಗಳ ಸಾರ್ವಜನಿಕ ಜೀವನದಲ್ಲಿ ನಾನು ರೈತರ ಕಷ್ಟಗಳು, ಸವಾಲುಗಳನ್ನು ಬಹಳ ಹತ್ತಿರದಿಂದ  ಕಂಡಿದ್ದೇನೆ. ಕೇಂದ್ರ ಸರ್ಕಾರ ಒಂದು ವರ್ಷದ ಹಿಂದೆ ಕಳೆದ ಸೆಪ್ಟೆಂಬರ್  ತಿಂಗಳಲ್ಲಿ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. 

ಇನ್ನು ಕೆಲವೇ ತಿಂಗಳುಗಳಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದೆ. ಇಷ್ಟು ಸಮಯಗಳಿಂದ ನಿರಂತರವಾಗಿ ರೈತರ ಮಸೂದೆಗೆ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈಗ ಕಾಯ್ದೆಯನ್ನು ಹಿಂಪಡೆದಿರುವುದು ರಾಜಕೀಯ ನಡೆ. ಚುನಾವಣೆ ಸಂದರ್ಭದಲ್ಲಿ ಅನಗತ್ಯ ವಿವಾದ ಮೈಮೇಲೆ ಎಳೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಂತಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಮೂರು ತಿದ್ದುಪಡಿಗಳು ಮಸೂದೆಗಳು: ಕೇಂದ್ರ ಸರ್ಕಾರ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯಿದೆ, 2020; ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020ನ್ನು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸಂಸತ್ತಿನಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಆದರೆ ಅದಕ್ಕೆ ಪಂಜಾಬ್, ಹರ್ಯಾಣ ಸೇರಿದಂತೆ ಕೆಲ ಭಾಗಗಳ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಲೇ ಬಂದಿದ್ದರು. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಪಡಿಸಲು ತಿದ್ದುಪಡಿ ಮಸೂದೆ ಅತ್ಯಂತ ಉಪಯೋಗಕಾರಿ ಎಂದು ಕೇಂದ್ರ ಸರ್ಕಾರ ರೈತರ ಮನವೊಲಿಕೆಗೆ ಪ್ರಯತ್ನಿಸುತ್ತಿತ್ತು.

ರೈತರೊಂದಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್, ಗೃಹ ಸಚಿವ ಅಮಿತ್ ಶಾ ಮೊದಲಾದವರು 11 ಸುತ್ತಿನ ಔಪಚಾರಿಕ ಮಾತುಕತೆ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಇದು ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲದೆ ರೈತರ ಪ್ರತಿಭಟನೆ, ಹೋರಾಟ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಹಲವು ಸೆಲೆಬ್ರಿಟಿಗಳು ರೈತರ ಪರವಹಿಸಿ ಮಾತನಾಡಿದ್ದರು. 

ಕಳೆದ ಜನವರಿ 26ರಂದು ದೆಹಲಿಯಲ್ಲಿ ಗಣರಾಜ್ಯೋತ್ಸವ ಸಮಯದಲ್ಲಿ ತೀವ್ರ ಹಿಂಸಾಚಾರ, ಪ್ರತಿಭಟನೆ ಕೂಡ ನಡೆದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com