ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ನಿನ್ನೆ ದಾಳಿ ನಡೆಸಿರುವ ಮಾದಕ ವಸ್ತು ನಿಯಂತ್ರಣ ದಳ (ಎನ್‌ಸಿಬಿ) 10 ಮಂದಿಯನ್ನು ಬಂಧಿಸಿದೆ ಎಂದು ತಿಳಿದುಬಂದಿದೆ.
ದಾಳಿಯ ವೇಳೆ ಕೊಕೇನ್, ಹಶೀಶ್ ಹಾಗೂ ಎಂಡಿಎಂಎ ಸೇರಿ ಹಲವು ರೀತಿಯ ನಿಷೇಧಿತ ಮಾದಕ ದ್ರವ್ಯಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಡಲಿನಲ್ಲಿ ಕ್ರೂಸ್ ಹಡಗಿನಲ್ಲಿ ಮೋಜು-ಮಸ್ತಿ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಪಡೆದ ಅಧಿಕಾರಿಗಳು ಪ್ರಯಾಣಿಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಇದೀಗ ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. 8-10 ಮಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್'ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರು ಹೇಳಿದ್ದಾರೆ.
ಇದೇ ವೇಳೆ ಪಾರ್ಟಿಯಲ್ಲಿ ಸೆಲೆಬ್ರಿಟಿಗಳಿದ್ದರೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ಯಾವುದೇ ರೀತಿಯ ಹೇಳಿಕೆಯನ್ನೂ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
Advertisement