'ಲಖಿಂಪುರ್ ಹಿಂಸಾಚಾರದಿಂದ ರಾಜಕೀಯ ಮೈಲೇಜ್ ಪಡೆಯಲು ಕಾಂಗ್ರೆಸ್ ಯತ್ನ': ಬಿಜೆಪಿ
ನವದೆಹಲಿ: ಉತ್ತರ ಪ್ರದೇಶ ಲಖಿಂಪುರ್ ಖೇರಿ ಘಟನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಶಾಂತಿಯನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಬುಧವಾರ ಆರೋಪಿಸಿದೆ.
ಲಖಿಂಪುರ್ ಹಿಂಸಾಚಾರದಿಂದ ರಾಜಕೀಯ ಮೈಲೇಜ್ ಪಡೆಯಲು ಒಂದು ಅವಕಾಶವಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೇಜವಾಬ್ದಾರಿತನ ರಾಹುಲ್ ಗಾಂಧಿ ಅವರ ಎರಡನೇ ಹೆಸರಾಗಿದೆ. ಹಿಂಸಾಚಾರಕ್ಕೆ "ಪ್ರಚೋದನೆ" ನೀಡಲು ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಶಾಂತಿ ಕಾಪಾಡುವುದು ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಮೊದಲ ಆದ್ಯತೆಯಾಗಿದೆ. ಹೀಗಾಗಿ ಹಲವು ವಿರೋಧ ಪಕ್ಷದ ನಾಯಕರಿಗೆ ಲಖಿಂಪುರ್ ಖೇರಿಗೆ ಭೇಟಿ ನೀಡಲು ಅವಕಾಶ ನೀಡಿಲ್ಲ ಎಂದು ಸಂಬಿತ್ ಪತ್ರಾ ಹೇಳಿದ್ದಾರೆ.
ಕಳೆದ ಭಾನುವಾರ ಹಿಂಸಾಚಾರ ನಡೆದ ಸ್ಥಳಕ್ಕೆ ಹೋಗಿ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಲು ಬಯಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು.
ಕಳೆದ ಭಾನುವಾರ ರಾತ್ರಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೃಷಿ ಕಾಯ್ದೆ ವಿರೋಧಿಸಿ ರೈತರು ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಕಾರನ್ನು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಈ ಘಟನೆಯಿಂದ ಹಿಂಸಾಚಾರ ನಡೆದಿದ್ದು, ಇಲ್ಲಿಯವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ