ಎಫ್ಐಆರ್ ರದ್ದು, ಬಂಧನದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ರಾಣೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ಬಂಧನದಿಂದ ರಕ್ಷಣೆ ನೀಡಬೇಕು ಎಂದು ಕೋರಿ...
Published: 24th August 2021 03:43 PM | Last Updated: 24th August 2021 03:43 PM | A+A A-

ನಾರಾಯಣ ರಾಣೆ
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ಬಂಧನದಿಂದ ರಕ್ಷಣೆ ನೀಡಬೇಕು ಎಂದು ಕೋರಿ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಮಂಗಳವಾರ ಮುಂಬೈ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ವಕೀಲ ಅನಿಕೇತ್ ನಿಕಮ್ ಅವರ ಮೂಲಕ ರಾಣೆ ಅವರು ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತಮ್ಮ ವಿರುದ್ಧದ ಎಫ್ಐಆರ್ ಗಳನ್ನು ರದ್ದುಗೊಳಬೇಕು ಮತ್ತು ತಮ್ಮ ವಿರುದ್ಧ ಬಂಧನ ಅಥವಾ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ನೀಡಿ ಮಧ್ಯಂತರ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್ ಜೆ ಜಮಾದಾರ್ ಅವರ ವಿಭಾಗೀಯ ಪೀಠದ ಮುಂದೆ ಸಲ್ಲಿಸಲಾಗಿದ್ದು, ಮಂಗಳವಾರವೇ ತುರ್ತು ವಿಚಾರಣೆಗೆ ಕೋರಲಾಗಿದೆ.
ಆದಾಗ್ಯೂ, ವಿಭಾಗೀಯ ಪೀಠ ನೇರವಾಗಿ ತಮೆಗೆ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ನಿರಾಕರಿಸಿದ್ದು, ಕಾರ್ಯವಿಧಾನವನ್ನು ಅನುಸರಿಸುವಂತೆ ವಕೀಲರಿಗೆ ಸೂಚಿಸಲಾಗಿದೆ.
"ಮೊದಲು ತುರ್ತು ವಿಚಾರಣೆ ಕೋರಿ ನೋಂದಾವಣೆ ಇಲಾಖೆಯ ಮುಂದೆ ಅರ್ಜಿ ಸಲ್ಲಿಸಿ. ನಂತರ ನಾವು ಅದನ್ನು ಪರಿಗಣಿಸುತ್ತೇವೆ" ಎಂದು ನ್ಯಾಯಾಲಯ ಹೇಳಿದೆ.
ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ
ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.
ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ
ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಸಂಬಂಧ ಅವರ ವಿರುದ್ಧ ಹಲವು ಕಡೆ ಕೇಸ್ ದಾಖಲಿಸಲಾಗಿದೆ.
ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ.