ಹಫ್ತಾ ವಸೂಲಿ ಪ್ರಕರಣ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅಮಾನತು, ಶಿಸ್ತು ಕ್ರಮಕ್ಕೆ ಚಾಲನೆ
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಗುರುವಾರ ಅಮಾನತುಗೊಳಿಸಿದೆ ಮತ್ತು 'ಕೆಲವು ಅಕ್ರಮಗಳು ಹಾಗೂ ಲೋಪಗಳ' ಆಧಾರದ...
Published: 02nd December 2021 08:02 PM | Last Updated: 03rd December 2021 02:22 PM | A+A A-

ಪರಮ್ ಬೀರ್ ಸಿಂಗ್
ಮುಂಬೈ: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಗುರುವಾರ ಅಮಾನತುಗೊಳಿಸಿದೆ ಮತ್ತು 'ಕೆಲವು ಅಕ್ರಮಗಳು ಹಾಗೂ ಲೋಪಗಳ' ಆಧಾರದ ಮೇಲೆ ಅವರ ವಿರುದ್ಧ ಶಿಸ್ತು ಕ್ರಮ ಆರಂಭಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಿನವೇ ಹಿರಿಯ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ.
ಇದನ್ನು ಓದಿ: ಕೋರ್ಟ್ ಆದೇಶದಂತೆ ತನಿಖೆಗೆ ಸಹಕರಿಸುತ್ತೇನೆ: ಮುಂಬೈನಲ್ಲಿ ಪರಮ್ ಬೀರ್ ಸಿಂಗ್ ಹೇಳಿಕೆ
ಪರಮ್ ಬೀರ್ ಸಿಂಗ್ ಅವರು ಕರ್ತವ್ಯಕ್ಕೆ ಅನಧಿಕೃತವಾಗಿ ಗೈರುಹಾಜರಾಗಿರುವುದು ಲೋಪವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪರಮ್ ಬೀರ್ ಸಿಂಗ್ ಅವರು ಮಹಾರಾಷ್ಟ್ರ ಗೃಹರಕ್ಷಕ ದಳದ ಮುಖ್ಯಸ್ಥರಾಗಿ ನೇಮಕಗೊಂಡ ನಂತರ ಕಳೆದ ಆರು ತಿಂಗಳಿನಿಂದ ಅವರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಅನಾರೋಗ್ಯದ ಆಧಾರದ ಮೇಲೆ ಅವರಿಗೆ ಆಗಸ್ಟ್ 29 ರವರೆಗೆ ರಜೆ ನೀಡಲಾಗಿತ್ತು, ಆದರೆ ನಂತರವೂ ಅವರು ಕರ್ತವ್ಯಕ್ಕೆ ಹಾಜರಾಗಲು ಐಪಿಎಸ್ ಅಧಿಕಾರಿ ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು 100 ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರ ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು.
ಈ ಸಂಬಂಧ ಜುಲೈ 23 ರಂದು ಪರಮ್ ಬೀರ್ ಸಿಂಗ್, ಸಚಿನ್ ವಾಜೆ ಮತ್ತು ಇತರರ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.