ಗ್ರಾಹಕ ನ್ಯಾಯಾಲಯಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿ, ಇಲ್ಲದಿದ್ದರೆ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್: ಸುಪ್ರೀಂ ಎಚ್ಚರಿಕೆ
ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಬೇಕಾಗುತ್ತದೆ...
Published: 02nd December 2021 12:53 AM | Last Updated: 02nd December 2021 12:53 AM | A+A A-

ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಬೇಕಾಗುತ್ತದೆ ಎಂದು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ.
ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ಬರುವ ದಿನಗಳಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಲಾಗುವುದು ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಎಂ.ಎಂ.ಸುಂದರೇಶ್ ಅವರಿದ್ದ ನ್ಯಾಯಪೀಠ, ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸಿತು.
ಗ್ರಾಹಕರ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುದಾನ ನೀಡಿದೆ. ಒಂದು ವೇಳೆ ರಾಜ್ಯಗಳು ತಮ್ಮ ಪಾಲಿನ ಹಣವನ್ನು ನೀಡದಿದ್ದರೆ, ಈ ಅನುದಾನ ವಾಪಸ್ ಹೋಗುವ ಸಾಧ್ಯತೆ ಇದೆ ಎಂದೂ ನ್ಯಾಯಪೀಠ ಎಚ್ಚರಿಸಿತು.