ಕೃಷಿ ಕಾನೂನು ವಿರೋಧಿಸಿ ಹೋರಾಟ; ಮೃತ ರೈತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ
ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡ ಲುಧಿಯಾನಾದ ನಾಲ್ಕು ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ ಎಂದು ಪಂಜಾಬ್ ಸರ್ಕಾರ ಮಾಹಿತಿ ನೀಡಿದೆ.
Published: 21st January 2021 02:28 PM | Last Updated: 21st January 2021 02:56 PM | A+A A-

ರೈತರ ಪ್ರತಿಭಟನೆ
ಲುಧಿಯಾನ: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡ ಲುಧಿಯಾನಾದ ನಾಲ್ಕು ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ ಎಂದು ಪಂಜಾಬ್ ಸರ್ಕಾರ ಮಾಹಿತಿ ನೀಡಿದೆ.
ಈ ಬಗ್ಗೆ ಲುಧಿಯಾನ ಜಿಲ್ಲಾಧಿಕಾರಿ ವರಿಂದರ್ ಕುಮಾರ್ ಶರ್ಮಾ ಮಾಹಿತಿ ನೀಡಿದ್ದು, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ನಿರ್ದೇಶನದ ಮೇರೆಗೆ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸುತ್ತಿದ್ದ ಮುಷ್ಕರದಲ್ಲಿ ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡ ರೈತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
'ಶೀತ ಹವಾಮಾನ ಮತ್ತು ಮಳೆಯಿಂದಾಗಿ, ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಮೂರು ಕೃಷಿ ಕಾನೂನುಗಳಿಗೆ ವಿರುದ್ಧವಾಗಿ ದೆಹಲಿಯ ವಿವಿಧ ಗಡಿ ಕೇಂದ್ರಗಳಲ್ಲಿ ಒಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂದೋಲನದಲ್ಲಿ ಭಾಗವಹಿಸಿದ ಹಲವಾರು ರೈತರು ಹೃದಯಾಘಾತ ಮತ್ತು ರಸ್ತೆ ಅಪಘಾತ ಸೇರಿದಂತೆ ವಿವಿಧ ಕಾರಣಗಳಿಂದ ಸಾವನ್ನಪ್ಪಿದ್ದಾರೆ. ಈ ಪೈಕಿ ಲುಧಿಯಾನ ಜಿಲ್ಲೆಯ ಐದು ರೈತರು ಮುಷ್ಕರದಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನಾಲ್ಕು ರೈತರ ಕುಟುಂಬಗಳಿಗೆ ಈಗಾಗಲೇ 5 ಲಕ್ಷ ರೂ. ಪರಿಹಾರ ನೀಡಲಾಗಿದ್ದು, ಐದನೇ ರೈತನಿಗೆ ಪರಿಹಾರ ನೀಡುವ ಪ್ರಕ್ರಿಯೆಯ ಚಾಲ್ತಿಯಲ್ಲಿದೆ ಎಂದು ಅವರು ಹೇಳಿದರು.