ಐಟಿ ಕಾಯ್ದೆಯ ಸೆಕ್ಷನ್ 66 ಎ ಅಡಿ ಪ್ರಕರಣಗಳನ್ನು ದಾಖಲಿಸಬೇಡಿ: ಕೇಂದ್ರ ಗೃಹ ಸಚಿವಾಲಯ
ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ರದ್ದುಗೊಳಿಸಲಾದ ಸೆಕ್ಷನ್ 66 ಎ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸದಂತೆ ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ.
Published: 15th July 2021 12:40 AM | Last Updated: 15th July 2021 12:40 AM | A+A A-

ಸಂಗ್ರಹ ಚಿತ್ರ
ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ರದ್ದುಗೊಳಿಸಲಾದ ಸೆಕ್ಷನ್ 66 ಎ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸದಂತೆ ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ.
ಅಂತೆಯೇ ರದ್ದುಗೊಳಿಸಲಾದ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸದಿರಲು ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸಲಹೆ ಮಾಡಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನವನ್ನು ಅನುರಿಸರಿಸಲು ಸಂಸ್ಥೆಗಳನ್ನು ಜಾಗೃತಗೊಳಿಸುವಂತೆ ಕೂಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಐಟಿ ಕಾಯ್ದೆ ಸೆಕ್ಷನ್ 66ಎ ಯನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದ 6 ವರ್ಷದ ಬಳಿಕವೂ ಈ ಸೆಕ್ಷನ್ ಅಡಿಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವ ಕುರಿತು ಅಚ್ಚರಿ ಮತ್ತು ಆತಂಕ ವ್ಯಕ್ತಪಡಿಸಿತ್ತು. ಇದಾದ ಕೆಲ ದಿನಗಳ ಅಂತರದಲ್ಲೇ ಕೇಂದ್ರ ಗೃಹ ಸಚಿವಾಲಯ ಈ ಮಹತ್ತರ ನಿರ್ದೇಶನ ನೀಡಿದೆ.
Union Home Ministry requests States and Union Territories to direct all Police Stations under their jurisdiction not to register cases under the repealed Section 66 A of the Information Technology Act, 2000.
— All India Radio News (@airnewsalerts) July 14, 2021
ಶ್ರೇಯಾ ಸಿಂಘಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ 2015 ಮಾರ್ಚ್ 24ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ದ ಸೆಕ್ಷನ್ 66 ಎಯನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು. ಅಲ್ಲದೆ, ಈ ಸೆಕ್ಷನ್ ಅಸಾಂವಿಧಾನಿಕ ಹಾಗೂ ಅಭಿವ್ಯಕ್ತಿ ಸ್ವಾತಂತ್ರದ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿತ್ತು.
ಈ ಸೆಕ್ಷನ್ ಅಡಿಯಲ್ಲಿ ಈಗಲೂ ಪ್ರಕರಣಗಳು ದಾಖಲಾಗುತ್ತಿರುವುದನ್ನು ಪ್ರಶ್ನಿಸಿ ಸ್ವಯಂ ಸೇವಾ ಸಂಸ್ಥೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (ಪಿಯುಸಿಎಲ್)’ ಸಲ್ಲಿಸಿದ ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಎಫ್. ನಾರಿಮನ್, ಕೆ.ಎಂ. ಜೋಸೆಫ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ, ಈ ಸೆಕ್ಷನ್ ಅನ್ನು ಜನರ ಮೇಲೆ ಈಗಲೂ ಹೇರುತ್ತಿರುವುದು ‘ಆಘಾತಕಾರಿ’ ಹಾಗೂ ‘ಭಯಾನಕ’ ಎಂದು ಹೇಳಿತ್ತು.