ದುರಂತ ಸಂಭವಿಸಿದರೂ ಪಾಠ ಕಲಿಯದ ಅಧಿಕಾರಿಗಳು: ಆಸ್ಪತ್ರೆಗಳಲ್ಲಿ ಮುಂದುವರೆದ ಆಕ್ಸಿಜನ್ ಕೊರತೆ, ಸಂಕಷ್ಟದಲ್ಲಿ ಸೋಂಕಿತರು

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ದುರಂತ ಸಂಭವಿಸಿದರೂ ಇನ್ನೂ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿಗೊಳಗಾಗಿರುವ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ದುರಂತ ಸಂಭವಿಸಿದರೂ ಇನ್ನೂ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿಗೊಳಗಾಗಿರುವ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಭಾನುವಾರ ರಾತ್ರಿ 36 ಆಕ್ಸಿಜನ್ ಸಿಲಿಂಡರ್ ಗಳು ಸರಬರಾಜಾಗಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಸರಬರಾಜಾಗದ ಕಾರಣ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 

ಆಕ್ಸಿಜನ್ ಕೊರತೆ ಎದುರಾಗುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದ ಕೆಲ ಸೋಂಕಿತರಿಗೆ ಉಸಿರಾಟ ಸಮಸ್ಯೆ ಶುರುವಾಗಿದೆ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ಬೇರೆ ಆಸ್ಪತ್ರೆಗಳಿಗೆ ದಾಖಲು ಮಾಡುವಂತೆ ಸೋಂಕಿತರ ಕುಟುಂಬಸ್ಥರಿಗೆ ಸಲಹೆ ನೀಡಿದ್ದಾರೆ. ಇದಾದ ಕೆಲವೇ ನಿಮಿಷಗಳಲ್ಲೇ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಆಸ್ಪತ್ರೆಯ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು 

 ಪರಿಸ್ಥಿತಿ ಕೈ ಮೀರುತ್ತಿದ್ದಂತೆಯೇ ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಸಂಸದ ಪ್ರತಾಪ್ ಸಿಂಹ ಅವರು ಕೂಡಲೇ ಮಧ್ಯಪ್ರವೇಶಿಸಿ ಆಸ್ಪತ್ರೆಗೆ 50 ಆಕ್ಸಿಜನ್ ಸಿಲಿಂಡರ್ ಗಳನ್ನು ಒದಗಿಸಿದ್ದಾರೆ. ಅಲ್ಲದೆ, ಇನ್ನೂ 180 ಆಕ್ಸಿಜನ್ ಸಿಲಿಂಡರ್ ಗಳಿಗೆ ವ್ಯವಸ್ಥೆ ಮಾಡಿದ್ದಾರೆ. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಲಿಂಡರ್ ಗಳು ಸರಬರಾಜಾಗಿದ್ದರೆ ದುರಂತ ಸಂಭವಿಸುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ. 

ಈ ನಡುವೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲೂ ಇಂತಹದ್ದೇ ಘಟನೆ ಸಂಭವಿಸಿದೆ. ಆಕ್ಸಿಜನ್ ನೀಡಿದ್ದರೂ, ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. 

ಇನ್ನು ಆಂಧ್ರಪ್ರದೇಶ ಹಿಂದುಪುರ ಸರ್ಕಾರಿ ಆಸ್ಪತ್ರೆಯಲ್ಲೂ ಕೂಡ ಆಕ್ಸಿಜನ್ ಕೊರತೆಯಿಂದಾಗಿ 8 ಮಂದಿ ಸೋಂಕಿತರು ಸೋಮವಾರ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಿಗ್ಗೆ 5.10ರ ಸುಮಾರಿಗೆ ಸೋಂಕಿತರಿಗೆ ನೀಡಲಾಗಿದ್ದ ಆಕ್ಸಿಜನ್ ನಲ್ಲಿ ಸಮಸ್ಯೆಗಳು ಆರಂಭವಾಗಿತ್ತು. ಕೂಡಲೇ ಸೋಂಕಿತರ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳೊಂದಿಗೆ ಮಾತನಾಡಲು ಆರಂಭಿಸಿದ್ದರು. ಬಳಿಕ ಆಸ್ಪತ್ರೆ ಸಿಬ್ಬಂದಿಗಳ ವರ್ತನೆಗೆ ಬೇಸತ್ತ ಜನರು ಆಸ್ಪತ್ರೆಯಲ್ಲಿ ದಾಂಧಲೆ ಶುರು ಮಾಡಿದ್ದರು. 

ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್ ಕೊರತೆ ಎದುರಾಗಿದೆ. ಧರಮ್ ವೀರ್ ಸೋಲಂಕಿ ಆಸ್ಪತ್ರೆ, ಎಂಕೆಡಬ್ಲ್ಯೂ ಆಸ್ಪತ್ರೆ, ಬಟ್ರಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಶುರುವಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com