ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ಧ 3ನೇ ಬಾರಿ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ವಿರುದ್ಧ ಮುಂಬೈ ಕೋರ್ಟ್ ಬುಧವಾರ ಮತ್ತೊಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.
Published: 10th November 2021 04:31 PM | Last Updated: 10th November 2021 04:37 PM | A+A A-

ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್
ಮುಂಬೈ: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ವಿರುದ್ಧ ಮುಂಬೈ ಕೋರ್ಟ್ ಬುಧವಾರ ಮತ್ತೊಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ. ಇದು ತಲೆಮರೆಸಿಕೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ವಿರುದ್ಧ ಜಾರಿಗೊಳಿಸುತ್ತಿರುವ ಮೂರನೇ ಬಂಧನ ವಾರಂಟ್ ಆಗಿದೆ.
ಇದೇ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಇತರ ಇಬ್ಬರು ಆರೋಪಿ ಪೊಲೀಸ್ ಅಧಿಕಾರಿಗಳನ್ನು ಮುಂಬೈ ಕೋರ್ಟ್ ಮಂಗಳವಾರ ಏಳು ದಿನಗಳ ಕಾಲ ಮಹಾರಾಷ್ಟ್ರ ಸಿಐಡಿ ವಶಕ್ಕೆ ನೀಡಿದೆ.
ಇದನ್ನು ಓದಿ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಈ ಹಿಂದೆ ಮುಂಬೈ ಕ್ರೈಂ ಬ್ರಾಂಚ್‌ನಲ್ಲಿ ನಿಯೋಜನೆಗೊಂಡಿದ್ದ ಇನ್ಸ್‌ಪೆಕ್ಟರ್‌ಗಳಾದ ನಂದಕುಮಾರ್ ಗೋಪಾಲೆ ಮತ್ತು ಆಶಾ ಕೊರ್ಕೆ ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ಸೋಮವಾರ ಬಂಧಿಸಿತ್ತು.
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು 100 ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರ ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು.
ಈ ಸಂಬಂಧ ಜುಲೈ 23 ರಂದು ಪರಮ್ ಬೀರ್ ಸಿಂಗ್, ಸಚಿನ್ ವಾಜೆ ಮತ್ತು ಇತರರ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.