ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೇಶಮುಖ್ ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿ ಮಾಜಿ ಸಚಿವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯ ಆರೋಪಿಯ ಹೆಚ್ಚಿನ ವಿಚಾರಣೆಯ ಅಗತ್ಯ ಇಲ್ಲ ಎಂದು ಹೇಳಿದ ಹಿನ್ನೆಲೆಯಲ್ಲಿ ದೇಶಮುಖ್ ಅವರನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ನವೆಂಬರ್ 1 ರಂದು ತಡರಾತ್ರಿ ದೇಶಮುಖ್ ಅವರನ್ನು ಇಡಿ ಬಂಧಿಸಿತ್ತು.
ದೇಶಮುಖ್ ಅವರು ರಾಜ್ಯದ ಗೃಹ ಸಚಿವರಾಗಿದ್ದಾಗ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೂಲಕ ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ 4.70 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ