ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ಧ ಲುಕೌಟ್ ನೋಟಿಸ್ ಜಾರಿ
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶ ತೊರೆದಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.
Published: 01st October 2021 04:06 PM | Last Updated: 01st October 2021 04:06 PM | A+A A-

ಪರಮ್ ಬಿರ್ ಸಿಂಗ್
ಮುಂಬೈ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶ ತೊರೆದಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರು ಹೇಳಿದ್ದಾರೆ.
ಗುರುವಾರ ತಡರಾತ್ರಿ ನಡೆದ ಸಮಾರಂಭದಲ್ಲಿ ಮಹಾ ಗೃಹ ಸಚಿವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. "ಸಿಂಗ್ ದೇಶವನ್ನು ತೊರೆದಿರುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ" ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ವಿರುದ್ಧದ ಸುಲಿಗೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ
"ಸರ್ಕಾರಿ ಅಧಿಕಾರಿಯಾಗಿರುವುದರಿಂದ, ವಿದೇಶ ಪ್ರವಾಸಕ್ಕೆ ನಿರ್ಬಂಧಗಳಿವೆ. ಸರ್ಕಾರದ ಅನುಮತಿಯಿಲ್ಲದೆ ನೀವು ದೇಶವನ್ನು ತೊರೆಯಲು ಸಾಧ್ಯವಿಲ್ಲ. ಆದರೂ ಅವರು ದೇಶ ತೊರೆದಿದ್ದರೆ ಅದು ಒಳ್ಳೆಯದಲ್ಲ" ಎಂದು ಪಾಟೀಲ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಲಂಚದ ಆರೋಪ ಹೊರಿಸಿದ ಸಿಂಗ್ ಅವರನ್ನು ಹುಡುಕಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು 100 ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರ ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು.