ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ, ಅಜಯ್ ಮಿಶ್ರಾ ವಜಾಗೊಳಿಸುವಂತೆ ಆಗ್ರಹ
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
Published: 13th October 2021 01:54 PM | Last Updated: 13th October 2021 02:00 PM | A+A A-

ರಾಹುಲ್ ಗಾಂಧಿ
ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನಿಯೋಗ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸಿದೆ.
ಧರಣಿ ನಿರತ ರೈತರ ಮೇಲೆ ಕಾರು ಹರಿಸಿ ಹತ್ಯೆಗೈದ ಪ್ರಕರಣದಲ್ಲಿ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾನನ್ನು ಈಗಾಗಲೇ ಬಂಧಿಸಲಾಗಿದೆ.
ಇದನ್ನೂ ಓದಿ: ಲಖಿಂಪುರ್ ಖೇರಿ ಹಿಂಸಾಚಾರ: ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೀವ್ರ ವಿಚಾರಣೆ, ಶರಣಾಗತಿ ಅರ್ಜಿ ಸಲ್ಲಿಸಿದ ಅಂಕಿತ್ ದಾಸ್
ಆಯೋಗವು ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದ ಸಂಗತಿಗಳ ಕುರಿತು ರಾಷ್ಟ್ರಪತಿಗೆ ಜ್ಞಾಪನಾ ಪತ್ರವನ್ನು ಸಲ್ಲಿಸಿದೆ ಎಂದು ಪಕ್ಷ ತಿಳಿಸಿದೆ.
"ಆರೋಪಿಯ ತಂದೆ ಗೃಹ ಖಾತೆ ರಾಜ್ಯ ಸಚಿವರಾಗಿದ್ದು ಅವರ ಉಪಸ್ಥಿತಿಯಲ್ಲಿ ನ್ಯಾಯಯುತ ತನಿಖೆ ಸಾಧ್ಯವಿಲ್ಲದ ಕಾರಣ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದು ನಾವು ರಾಷ್ಟ್ರಪತಿಗೆ ಹೇಳಿದ್ದೇವೆ. ಅಂತೆಯೇ, ಸುಪ್ರೀಂ ಕೋರ್ಟ್‌ನ ಇಬ್ಬರು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ನಾವು ಕೂಡ ಒತ್ತಾಯಿಸಿದ್ದೇವೆ'' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, "ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ನಾವು ಎಲ್ಲ ವಿವರಗಳನ್ನು ರಾಷ್ಟ್ರಪತಿಗೆ ನೀಡಿದ್ದೇವೆ. ನಾವು ಎರಡು ಬೇಡಿಕೆಗಳನ್ನು ಹೊಂದಿದ್ದೇವೆ. ಹಾಲಿ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಯಬೇಕು ಹಾಗೂ ಗೃಹ ಸಚಿವ ಅಜಯ್ ಮಿಶ್ರಾ ಟೆನಿ ರಾಜೀನಾಮೆ ನೀಡಬೇಕು ಅಥವಾ ವಜಾಗೊಳಿಸಬೇಕು. ಆಗ ಮಾತ್ರ ನ್ಯಾಯ ಸಾಧ್ಯವಾಗುತ್ತದೆ'' ಎಂದು ತಿಳಿಸಿದ್ದಾರೆ.