ವಿವಾಹ ಮುಗಿಸಿ ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ಹಲ್ಲೆ; ಸಾಮೂಹಿಕ ಅತ್ಯಾಚಾರ, ಚಿನ್ನಾಭರಣ ದರೋಡೆ, 8 ಮಂದಿ ಬಂಧನ
ಗುಂಟೂರು: ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ಮಾಡಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದು ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಮೇಡಿಕೊಂಡೂರು ವಲಯದ ಪಲಡುಗು ಅಡ್ಡ ರಸ್ತೆಯಲ್ಲಿ ಬುಧವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ತಮ್ಮ ಸಂಬಂಧಿಕರ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗಳನ್ನು ದರೋಡೆಕೋರರ ಗುಂಪು ತಡೆದಿದ್ದು, ದಂಪತಿಗೆ ಚಾಕು ತೋರಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಳಿಕ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿ ಅಕೆಯ ಬಳಿ ಇದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಘಟನೆ ನಡೆದ ದಿನವೇ ಸಂತ್ರಸ್ತ ಮಹಿಳೆ ಸಮೀಪದ ಸತ್ತನ್ನಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ 8 ಆರೋಪಿಗಳನ್ನು ಬಂಧಿಸಿದ್ದಾರೆ. ಎಲ್ಲ 8 ಆರೋಪಿಗಳೂ ಪಾಲದುಗು ಬಳಿ ಕೋಲ್ಡ್ ಸ್ಟೋರೇಜ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರೆಲ್ಲರೂ ಒಡಿಶಾ ಮತ್ತು ವಿಜಯನಗರದ ಯುವಕರು ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ