ಕೃಷಿ ಮಸೂದೆ ವಿರುದ್ದ ರೈತರ ಆಕ್ರೋಶ: ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ, ಗಾಜಿಪುರ ಗಡಿಯಲ್ಲಿ ಭಾರೀ ಸಂಚಾರ ದಟ್ಟಣೆ
ಕೇಂದ್ರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಸೋಮವಾರ ಹೋರಾಟ ಆರಂಭಿಸಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದುಬಂದಿದೆ.
Published: 27th September 2021 09:03 AM | Last Updated: 27th September 2021 12:56 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಕೇಂದ್ರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಸೋಮವಾರ ಹೋರಾಟ ಆರಂಭಿಸಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದುಬಂದಿದೆ.
ಪ್ರತಿಭಟನೆಗೆ 500 ಕ್ಕೂ ಹೆಚ್ಚು ಸಂಘಟನೆಗಳು, 15 ಕಾರ್ಮಿಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ.
ಇಂದು ಬೆಳಗ್ಗೆ 11 ಗಂಟೆಗೆ ರೈತ-ಕಾರ್ಮಿಕ ಸಂಘಟನೆಗಳು ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನಾ ರ‍್ಯಾಲಿ ಆಯೋಜಿಸಿವೆ.
ಇತ್ತ ಚಂಡೀಗಢದಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಸಂಪರ್ಕಿಸುವ ಹರಿಯಾಣ- ಪಂಜಾಬ್ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದಿದ್ದಾರೆ. ಹೆದ್ದಾರಿಗಳಲ್ಲಿ ನೂರಾರು ರೈತರು ಜಮಾವಣೆಗೊಂಡಿದ್ದರಿಂದ ಸಂಚಾರ ದಟ್ಟಣೆ ಎದುರಾಗಿದೆ. ಅಲ್ಲದೇ, ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿ, ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಸ್ಥಳಗಳಲ್ಲಿ ಭಾರಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ತುರ್ತು ವೈದ್ಯಕೀಯ ಸೇವೆಗಳಿಗೆ ಅವಕಾಶವಿದೆ.
'ಭಾರತ್ ಬಂದ್' ಹಿನ್ನೆಲೆ, ರಾಜ್ಯದಲ್ಲಿ ಸಂಚಾರ ದಟ್ಟಣೆಗಳಾಗುವ ಸಾಧ್ಯತೆಯಿದೆ. ರಿಯಾಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಹಿಂಸಾಚಾರ ತಡೆಗಟ್ಟುವುದು ಮತ್ತು ಸಂಚಾರ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಕಾರ್ಯನಿರ್ವಹಣೆ ಸುಲಭಗೊಳಿಸುವುದು ಈ ವ್ಯವಸ್ಥೆಗಳ ಪ್ರಾಥಮಿಕ ಉದ್ದೇಶ ಎಂದು ಅವರು ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರೈತರು ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಅವರು ಮನವಿ ಮಾಡಿದರು. ಬಂದ್ ಕರೆಯ ನೆಪದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಲಾಗಿದೆ. ವಿಭಿನ್ನ ಪ್ರತಿಭಟನೆ, ಜಾಥಾ ಮೂಲಕ ಕೇಂದ್ರ, ರಾಜ್ಯದ ವಿರುದ್ಧ ಅಸ್ತ್ರ ಪ್ರಯೋಗಿಸಲು ಕರೆ ನೀಡಲಾಗಿದೆ.