ಮಾಂಡೂಸ್ ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಶಾಲೆಗಳಿಗೆ ರಜೆ ಘೋಷಿಸಿದ ಸರ್ಕಾರ
ಚೆನ್ನೈ: ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಲ್ಲಕುರಿಚಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈಗಾಗಲೇ ರಾಜ್ಯದಲ್ಲಿ ಡಿಸೆಂಬರ್ 15 ರವರೆಗೆ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಮುನ್ಸೂಚನೆ ನೀಡಿದೆ. ಗುರುವಾರದವರೆಗೆ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಾಂಡೂಸ್ ಚಂಡಮಾರುತವು ತಮಿಳುನಾಡು ಕರಾವಳಿಯನ್ನು ದಾಟಿದ ನಂತರವೂ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಮಂಗಳವಾರ ತಮಿಳುನಾಡಿನ ಮೇಲೆ ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಗಂಟೆಗೆ 35-45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಮರಗಳು ಧರೆಗುರುಳಿದ್ದು, ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.