ಮುಂಬೈ: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿರುವ ಶಿಂಧೆಯವರು, ಇದೇ ಮೊದಲ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ. ಈಗ ಈ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ. ಗಡಿಭಾಗದ ಜನರೊಂದಿಗೆ ನಾವು ನಿಲ್ಲಬೇಕು ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಕೆಲ ಗಡಿ ಗ್ರಾಮಗಳ ನೀರಿನ ಸಮಸ್ಯೆ ನೀಗಿಸಿದ್ದೇವೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಮನವಿಗೆ ಮಧ್ಯಸ್ಥಿಕೆ ವಹಿಸಿದ್ದಾರೆ. ಮೊದಲ ಬಾರಿಗೆ ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಾವು ಗಡಿ ನಿವಾಸಿಗಳೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ಇದು ನಮ್ಮ ಹೆಮ್ಮೆಯ ವಿಚಾರ ಎಂದು ತಿಳಿಸಿದ್ದಾರೆ.
Advertisement