ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಐಷಾರಾಮಿ ಬಸ್‌-ಎಸ್‌ಯುವಿ ಡಿಕ್ಕಿ: ಒಂಬತ್ತು ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (SUV) ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಮೃತಪಟ್ಟಿದ್ದಾರೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ನಜ್ಜುಗುಜ್ಜಾದ ವಾಹನ
ಅಪಘಾತದಲ್ಲಿ ನಜ್ಜುಗುಜ್ಜಾದ ವಾಹನ

ನವಸಾರಿ: ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (SUV) ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಮೃತಪಟ್ಟಿದ್ದಾರೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ವಲ್ಸಾದ್ ಕಡೆಗೆ ಹೋಗುತ್ತಿದ್ದಾಗ ವೆಸ್ಮಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಎಸ್‌ಯುವಿ ವಿರುದ್ಧ ದಿಕ್ಕಿನಿಂದ ಬರುತ್ತಿತ್ತು ಎಂದು ನವಸಾರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರುಶಿಕೇಶ್ ಉಪಾಧ್ಯಾಯ ತಿಳಿಸಿದ್ದಾರೆ.

ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನರ ಪೈಕಿ ಎಂಟು ಮಂದಿ ಹಾಗೂ ಬಸ್‌ನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದವರು ಗುಜರಾತ್ ನ ಅಂಕಲೇಶ್ವರ ನಿವಾಸಿಗಳಾಗಿದ್ದು, ಅವರು ವಲ್ಸಾದ್‌ನಿಂದ ತಮ್ಮ ಊರಿಗೆ ಹಿಂತಿರುಗುತ್ತಿದ್ದರು. ಬಸ್‌ನ ಪ್ರಯಾಣಿಕರು ವಲ್ಸಾದ್‌ನಿಂದ ಬಂದವರು ಎಂದು ಹೇಳಿದರು.

ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ:  ಅಪಘಾತ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಖೇದ ವ್ಯಕ್ತಪಡಿಸಿದ್ದಾರೆ. ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಾಗಿರುವುದು ನೋವು ತಂದಿದೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರತಿ ಮೃತರ ಸಂಬಂಧಿಕರಿಗೆ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವಸಾರಿಯಲ್ಲಿ ಅಪಘಾತವಾದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರಿಗೆ ಸಂತಾಪಗಳು. ದೇವರು ಅವರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ಸ್ಥಳೀಯ ಆಡಳಿತ ಗಾಯಗೊಂಡವರ ಚಿಕಿತ್ಸೆಗೆ ಸಕಲ ಏರ್ಪಾಡು ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಗಾಯಗೊಂಡವರನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com