ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಮುಂದಿನ ವಾರಕ್ಕೆ ಮುಂದೂಡಿದೆ.
ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಜೂನ್ 17ರಿಂದ ಜೂನ್ 20ರವರೆಗೆ ತಮ್ಮ ವಿಚಾರಣೆಯನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯಕ್ಕೆ ರಾಹುಲ್ ಗಾಂಧಿ ಮನವಿ ಮಾಡಿದ್ದರು. ಅದರಂತೆ ಇಡಿ ವಿಚಾರಣೆಯನ್ನು ಮುಂದೂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 17ರಂದು ನಿಗದಿಯಾಗಿರುವ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಇಡಿ ತನಿಖಾಧಿಕಾರಿಗೆ ಕಾಂಗ್ರೆಸ್ ಸಂಸದ ಪತ್ರ ಬರೆದಿದ್ದರು.
ಕೋವಿಡ್-19 ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
51 ವರ್ಷದ ರಾಹುಲ್ ಗಾಂಧಿ ಕಳೆದ ಮೂರು ದಿನಗಳಲ್ಲಿ ಇಡಿ ತನಿಖಾಧಿಕಾರಿಗಳ ಮುಂದೆ ಸುಮಾರು 30 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ರಾಹುಲ್ ಗಾಂಧಿ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ.
ರಾಹುಲ್ ಗಾಂಧಿ ವಿರುದ್ಧದ ಇಡಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇದೊಂದು ದ್ವೇಷದ ರಾಜಕೀಯ ಎಂದು ಆರೋಪಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ