ನವದೆಹಲಿ: ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದ ಮೇರೆಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಾಂಬೇ ಹೈಕೋರ್ಟ್ ನಿಂದ ಖುಲಾಸೆಗೊಂಡಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ಹೌದು.. ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಶಿಕ್ಷೆಯಿಂದ ಖುಲಾಸೆಗೊಳಿಸಿ, ತಕ್ಷಣ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠವು ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ವಿಷಯದ ವಿಚಾರಣೆಗೆ ರಜಾ ದಿನದಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ ಆರ್ ಷಾ ಮತ್ತು ಬೇಲಾ ಎಂ ತ್ರಿವೇದಿ ಅವರ ಸುಪ್ರೀಂ ಕೋರ್ಟ್ ಪೀಠವು ಸಾಯಿಬಾಬಾ ಅವರ ದೈಹಿಕ ಅಸಾಮರ್ಥ್ಯ ಮತ್ತು ಆರೋಗ್ಯದ ಸ್ಥಿತಿಗತಿಗಳನ್ನು ಗಮನದಲ್ಲಿಟ್ಟುಕೊಂಡು ಗೃಹಬಂಧನದಲ್ಲಿ ಇರಿಸುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿದೆ.
ಅಲ್ಲದೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ನಿರ್ದೇಶನದಂತೆ ಸಾಯಿಬಾಬಾ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವುದನ್ನು ತಡೆ ಹಿಡಿದಿದೆ. ಅಲ್ಲದೆ ಹೈಕೋರ್ಟ್ ಆದೇಶದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ ಮನವಿಗೆ ಸಾಯಿಬಾಬಾ ಮತ್ತು ಇತರ ಆರೋಪಿಗಳಿಂದ ಪ್ರತಿಕ್ರಿಯೆ ಕೇಳಿದೆ.
ನಕ್ಸಲರ ಜತೆಗೆ ನಂಟು ಹೊಂದಿದ್ದಾರೆ ಎಂಬ ಕಾರಣಕ್ಕೆ ಸಾಯಿಬಾಬಾ ಅವರನ್ನು ಎಂಟು ವರ್ಷಗಳ ಹಿಂದೆ ಅವರನ್ನು ಬಂಧಿಸಲಾಗಿತ್ತು. ಆದರೆ, ಅವರ ವಿರುದ್ಧದ ಪ್ರಕರಣಗಳನ್ನು ಅಕ್ಟೋಬರ್ 14ರಂದು ರದ್ದುಪಡಿಸಿದ್ದ ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠವು, ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜ್‌ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಸಾಯಿಬಾಬಾ (55 ವರ್ಷ) ಅವರು ಈಗ ನಾಗಪುರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ಮಾನವ ಹಕ್ಕುಗಳು ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರ ಸಾಯಿಬಾಬಾ ಅವರನ್ನು 2014ರ ಮೇ 9ರಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಸಾಯಿಬಾಬಾ ಮತ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮಹೇಶ್ ಟಿರ್ಕಿ, ಪಾಂಡು ನರೋಟೆ, ಹೇಮ್ ಮಿಶ್ರಾ, ಪ್ರಶಾಂತ್ ರಾಹಿ ಮತ್ತು ವಿಜಯ ಟಿರ್ಕಿ ಅವರಿಗೆ 2017ರ ಮಾರ್ಚ್ 7ರಂದು ಗಡ್‌ಚಿರೋಲಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು. ನರೋಟೆ ಅವರು ಕೆಲ ಸಮಯದ ಹಿಂದೆ ಸೆರೆಮನೆಯಲ್ಲಿಯೇ ಮೃತಪಟ್ಟಿದ್ದಾರೆ.
Advertisement