ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ; ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಬಲಪಡಿಸಬೇಕು: ಖರ್ಗೆ

ಕಾಂಗ್ರೆಸ್‌ ಪಕ್ಷದಲ್ಲಿ ಯಾರೂ ದೊಡ್ಡವರು ಅಥವಾ ಚಿಕ್ಕವರು ಎಂಬುದಿಲ್ಲ. ಪಕ್ಷ ಸಂಘಟನೆಯನ್ನು ಬಲಪಡಿಸಲು ಕಾಂಗ್ರೆಸ್‌ನ ನಿಜವಾದ ಸೈನಿಕನಂತೆ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ ನಿಯೋಜಿತ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು...
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾರೂ ದೊಡ್ಡವರು ಅಥವಾ ಚಿಕ್ಕವರು ಎಂಬುದಿಲ್ಲ. ಪಕ್ಷ ಸಂಘಟನೆಯನ್ನು ಬಲಪಡಿಸಲು ಕಾಂಗ್ರೆಸ್‌ನ ನಿಜವಾದ ಸೈನಿಕನಂತೆ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ ನಿಯೋಜಿತ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

2019 ರ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ ಪಕ್ಷದ ಚುಕ್ಕಾಣಿ ಹಿಡಿದಿರುವ ಸೋನಿಯಾ ಗಾಂಧಿಯವರಿಂದ ಅಕ್ಟೋಬರ್ 26 ರಂದು ಖರ್ಗೆ ಅವರು ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ನನಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಸಮಾನರು ಮತ್ತು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬೆದರಿಕೆ ಹಾಕುವ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.

ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಮೂಲಕ ಕಾಂಗ್ರೆಸ್ ಸಂಘಟನೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಹೇಗೆ ಪ್ರಬಲವಾಗಿದೆ ಎಂಬುದನ್ನು ದೇಶಕ್ಕೆ ತೋರಿಸಿಕೊಟ್ಟಿದೆ ಎಂದು ಖರ್ಗೆ ತಿಳಿಸಿದರು.

ಇಲ್ಲಿ ಯಾರೂ ಚಿಕ್ಕವರಲ್ಲ ಮತ್ತು ದೊಡ್ಡವರಲ್ಲ. ಸಂಘಟನೆಯನ್ನು ಬಲಪಡಿಸಲು ನಾವೆಲ್ಲರೂ ಕಾರ್ಯಕರ್ತರಂತೆಕೆಲಸ ಮಾಡಬೇಕು ಎಂದು ಖರ್ಗೆ ಹೇಳಿದರು.

"ಸರ್ವಾಧಿಕಾರ"ಕ್ಕಾಗಿ ದೇಶವನ್ನು ಬಲಿಕೊಡಲು ಸಾಧ್ಯವಿಲ್ಲ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ಈ "ವಿನಾಶಕಾರಿ" (ವಿಧ್ವಂಸಕ) ಶಕ್ತಿಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಂದು ಗಂಟೆ ಹಿಂದೆ ತಮಗೆ ಕರೆ ಮಾಡಿ ಅಭಿನಂದಿಸಿದ್ದಾರೆ ಮತ್ತು "ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ" ಎಂದು ಹೇಳಿರುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com