ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿಯಿಂದ ಅಧಿಸೂಚನೆ ಪ್ರಕಟ

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಸುಧೀರ್ಘ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ ನಂತರ ಉತ್ತರಾಧಿಕಾರಿ ಆಯ್ಕೆಯ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ.
ಕಾಂಗ್ರೆಸ್ ಧ್ವಜ
ಕಾಂಗ್ರೆಸ್ ಧ್ವಜ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಸುಧೀರ್ಘ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ ನಂತರ ಉತ್ತರಾಧಿಕಾರಿ ಆಯ್ಕೆಯ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ.  ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅಧಿಸೂಚನೆ ಹೊರಡಿಸಿದ್ದು, ನೀಡಲಾಗಿರುವ ವೇಳಾಪಟ್ಟಿಯಂತೆ ಪಕ್ಷದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಅಧಿಸೂಚನೆ ಪ್ರಕಾರ, ಸೆಪ್ಟೆಂಬರ್ 24 ರಿಂದ 30ರವರೆಗೂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 1 ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 8 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಒಂದು ವೇಳೆ ಒಬ್ಬರಿಗಿಂತ ಹೆಚ್ಚಿನ ವ್ಯಕ್ತಿಗಳು ನಾಮಪತ್ರ ಸಲ್ಲಿಸಿದ್ದಲ್ಲಿ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತಗಳ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. 

ಅಖಿಲ ಭಾರತ ನ್ಯಾಷನಲ್ ಕಾಂಗ್ರೆಸ್ ನ ಸಂವಿಧಾನದ ಕಲಂ XVIII ಅಡಿ ದೊರೆತಿರುವ  ವಿನಾಯಿತಿ ಅಡಿ ಎಐಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ಪ್ರತಿನಿಧಿಗಳಿಗೆ ಆಹ್ವಾನ ನೀಡಿರುವುದಾಗಿ ಮಿಸ್ತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. 24 ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಾಮಪತ್ರ ಲಭ್ಯವಿರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಶಶಿ ತರೂರ್ ಎಐಸಿಸಿ ಅಧ್ಯಕ್ಷೀಯ ಸ್ಥಾನದ ರೇಸ್ ನಲ್ಲಿರುವುದು ಕಂಡುಬಂದಿದೆ. ದಶಕಗಳ ನಂತರ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ. 1998 ರಿಂದ ಸುಧೀರ್ಘ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಸೇವೆ ಸಲ್ಲಿಸಿದ್ದಾರೆ. 2017 ಮತ್ತು 2019ರ ನಡುವೆ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com