ಚುನಾವಣಾ ಚರ್ಚೆ: ರಾಜಸ್ಥಾನ, ಛತ್ತೀಸ್‌ಗಢ ಮುಖ್ಯಮಂತ್ರಿಗಳಿಂದ ಸೋನಿಯಾ ಗಾಂಧಿ ಭೇಟಿ
ಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು.
Published: 20th April 2022 08:58 PM | Last Updated: 21st April 2022 01:10 PM | A+A A-

ಸೋನಿಯಾ ಗಾಂಧಿ
ನವದೆಹಲಿ: ಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು.
ಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತೀವ್ರ ತಂತ್ರ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು, ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೀಡಿದ ಸಲಹೆಗಳ ಕುರಿತು ಮುಂದಿನ ಒಂದು ಅಥವಾ ಎರಡು ದಿನಗಳ ಕಾಲ ಚಿಂತನ ಮಂಥನ ನಡೆಯಲಿದೆ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ನಿವಾಸದಲ್ಲಿ ನಡೆದ ಸಭೆಯಲ್ಲಿ ಗೆಹ್ಲೋಟ್ ಮತ್ತು ಬಘೇಲ್ ಮುಂದೆ ತಮ್ಮ ತಂತ್ರವನ್ನು ಪ್ರಶಾಂತ್ ಕಿಶೋರ್ ಇಟ್ಟರು. ಇಬ್ಬರೂ ನಾಯಕರು ಸಲಹೆಗಳನ್ನೂ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಹಿರಿಯ ನಾಯಕರಾದ ಅಂಬಿಕಾ ಸೋನಿ, ಸುರ್ಜೇವಾಲಾ ಉಪಸ್ಥಿತರಿದ್ದರು.
ಇದನ್ನೂ ಓದಿ: ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಗೆ ಸೋನಿಯಾ ಗಾಂಧಿ ಉತ್ಸುಕ: ವೀರಪ್ಪ ಮೊಯ್ಲಿ
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ಪ್ರಶಾಂತ್ ಕಿಶೋರ್ ಅವರ ಸಲಹೆಗಳನ್ನು ಪರಿಗಣಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಮಿತಿಯನ್ನು ರಚಿಸಿದ್ದಾರೆ. ಈ ಸಲಹೆಗಳು ಕಾಂಗ್ರೆಸ್ ಸಂಘಟನೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ಮತ್ತು ಮುಂಬರುವ ಚುನಾವಣೆಯಲ್ಲಿ ಸಂಘಟನೆಯನ್ನು ಚುರುಕುಗೊಳಿಸುವ ಮತ್ತು ಸಂಘಟನಾ ಬದಲಾವಣೆಗಳನ್ನು ಮಾಡುವ ವಿಷಯಗಳನ್ನು ಒಳಗೊಂಡಿದೆ. ಈ ಸಲಹೆಗಳ ಕುರಿತು ಕಳೆದ ಮೂರು ದಿನಗಳಿಂದ ತೀವ್ರ ಸಮಾಲೋಚನೆ ನಡೆಸಲಾಗುತ್ತಿದೆ.
ಸಂಘಟನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಇಬ್ಬರೂ ಮುಖ್ಯಮಂತ್ರಿಗಳ ಸಲಹೆಗಳನ್ನು ಪಡೆಯುವುದು ಅಗತ್ಯ ಎಂದು ಸಮಿತಿಯು ಅರ್ಥಮಾಡಿಕೊಂಡಿದೆ ಎಂದು ಹೇಳಿದರು. ಇಂತಹ ಪರಿಸ್ಥಿತಿಯಲ್ಲಿ ಇಂದು ಉಭಯ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಾಯಿತು. ಮುಂದಿನ 24 ರಿಂದ 48 ಗಂಟೆಗಳಲ್ಲಿ ಈ ಸಮಾಲೋಚನೆ ಪೂರ್ಣಗೊಳ್ಳುತ್ತದೆ. ಕಳೆದ ಐದು ದಿನಗಳಲ್ಲಿ ಪ್ರಶಾಂತ್ ಕಿಶೋರ್ ನಾಲ್ಕನೇ ಬಾರಿಗೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದರು.