ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮುಂದಿನ 3 ದಿನ ತೀವ್ರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 3 ದಿನಗಳಲ್ಲಿ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ತೀವ್ರ ಮಳೆಯಾಗಲಿದ್ದು, ನಂತರ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಗುಜರಾತ್, ಪೂರ್ವ ರಾಜಸ್ಥಾನ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಆ. 6 ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ತಿರುವನಂತಪುರಂ: ಮುಂದಿನ ಮೂರು ದಿನಗಳವರೆಗೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದ್ದು, ನಂತರ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಆದರೆ, ಆಗಸ್ಟ್ 6 ರಿಂದ ಗುಜರಾತ್, ಪೂರ್ವ ರಾಜಸ್ಥಾನ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಈಮಧ್ಯೆ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಾಸರಗೋಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುತ್ತಿರುವುದೇ ಮಳೆ ಹೆಚ್ಚಾಗಲು ಕಾರಣ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕೇರಳದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದಾಗಿ ಪೆರಿಂಗಲ್ಕುತ್ತು ಅಣೆಕಟ್ಟಿನ ನಾಲ್ಕನೇ ಷಟರ್ ಅನ್ನು ತೆರೆಯಲಾಗಿದೆ. ಇದರ ಪರಿಣಾಮವಾಗಿ ಚಾಲಕುಡಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅಧಿಕಾರಿಗಳು ನದಿ ತೀರದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ಕೊಟ್ಟಾಯಂ ಜಿಲ್ಲೆಯಲ್ಲಿ ರಸ್ತೆಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ.

ಪ್ರತಿಕೂಲ ಹವಾಮಾನದ ಕಾರಣದಿಂದ ಅಲಪ್ಪುಳ, ಇಡುಕ್ಕಿ, ಪತ್ತನಂತಿಟ್ಟ, ಎರ್ನಾಕುಲಂ ಮತ್ತು ಕೊಟ್ಟಾಯಂನಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಮಹಾತ್ಮ ಗಾಂಧಿ ವಿಶ್ವವಿದ್ಯಾಲಯವು ಗುರುವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ  ಭೂಕುಸಿತ ಪೀಡಿತ ಎತ್ತರದ ಶ್ರೇಣಿಗಳು, ನದಿ ದಡಗಳು, ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಆಗಸ್ಟ್ 4 ರವರೆಗೆ ಅಲೆಗಳು 3.3 ಮೀಟರ್ ಎತ್ತರಕ್ಕೇರುವ ಸಾಧ್ಯತೆಯಿರುವುದರಿಂದ ನದಿ ತೀರಗಳಲ್ಲಿ ರಾತ್ರಿ ಪ್ರಯಾಣ ಮಾಡದಂತೆ ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com