ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
Published: 23rd August 2022 12:46 PM | Last Updated: 23rd August 2022 01:06 PM | A+A A-

ಸುಪ್ರೀಂಕೋರ್ಟ್
ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು, ಪ್ರಕರಣದಲ್ಲಿ ಅಪರಾಧಿಗಳಿಗೆ ಕ್ಷಮಾಪಣೆ ಮತ್ತು ಅದರ ಪರಿಣಾಮವಾಗಿ ಬಿಡುಗಡೆ ಮಾಡಿರುವುದರ ವಿರುದ್ಧ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಅಪರ್ಣಾ ಭಟ್ ಅವರು ಸಲ್ಲಿಸಿರುವ ಅರ್ಜಿಗಳನ್ನು ಗಮನಿಸಿತು.
'ನಾವು ಕೇವಲ ಆಪರಾಧಿಗಳಿಗೆ ನೀಡಿರುವ ಕ್ಷಮಾಪಣೆಯನ್ನು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂ ಕೋರ್ಟ್ ಆದೇಶವನ್ನು ಅಲ್ಲ. ಸುಪ್ರೀಂ ಕೋರ್ಟ್ ಆದೇಶವು ಉತ್ತಮವಾಗಿದೆ, ಮೈ ಲಾರ್ಡ್ಸ್. ಯಾವ ತತ್ವಗಳ ಆಧಾರದ ಮೇಲೆ ಅಪರಾಧಿಗಳಿಗೆ ವಿನಾಯಿತಿ ನೀಡಲಾಗಿದೆ ಎಂಬುದನ್ನು ನಾವು ಪ್ರಶ್ನಿಸುತ್ತಿದ್ದೇವೆ' ಎಂದು ಸಿಬಲ್ ಹೇಳಿದರು.
ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳಿಗೆ ಗುಜರಾತ್ ಸರ್ಕಾರವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನದಂದು ಶಿಕ್ಷೆ ಅವಧಿ ಕಡಿತಗೊಳಿಸಿ, ಬಿಡುಗಡೆ ಮಾಡಿತ್ತು.
ಇದನ್ನೂ ಓದಿ: ಬಿಲ್ಕಿಸ್ ಬಾನು ಅತ್ಯಾಚಾರಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರು: ಬಿಜೆಪಿ ಶಾಸಕ
ಕೆಲ ತಿಂಗಳ ಹಿಂದೆ ರಚಿಸಲಾದ ಸಮಿತಿಯು ಪ್ರಕರಣದ ಎಲ್ಲಾ 11 ಅಪರಾಧಿಗಳ ಕ್ಷಮಾಪಣೆ ಪರವಾಗಿ ಸರ್ವಾನುಮತದ ನಿರ್ಧಾರ ತೆಗೆದುಕೊಂಡು, ರಾಜ್ಯ ಸರ್ಕಾರಕ್ಕೆ ಶಿಫಾರಸು ಕಳುಹಿಸಿತ್ತು. ಅದರಂತೆ ಎಲ್ಲ ಆರೋಪಿಗಳು ಆ.14ರ ಸೋಮವಾರ ಬಿಡುಗಡೆಯಾಗಿದ್ದರು.
11 ಜನ ಅಪರಾಧಿಗಳು 15 ವರ್ಷಗಳಿಗೂ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಅವರಲ್ಲಿ ಒಬ್ಬರು ಅವಧಿಪೂರ್ವ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಅಪರಾಧಿಗಳ ಶಿಕ್ಷೆ ಹಿಂತೆಗೆದುಕೊಳ್ಳುವ ವಿಷಯ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಇದನ್ನೂ ಓದಿ: ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳು ಬಿಡುಗಡೆ!
2002ರ ಗೋಧ್ರಾ ರೈಲು ದಹನದ ನಂತರ ಭುಗಿಲೆದ್ದ ಹಿಂಸಾಚಾರದಿಂದ ತಪ್ಪಿಸಿಕೊಳ್ಳುವಾಗ 21 ವರ್ಷದ ಬಿಲ್ಕಿಸ್ ಬಾನು ಅವರ ಮೇಲೆ ಮಾರ್ಚ್ 3ರಂದು 11 ಮಂದಿ ಅತ್ಯಾಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು 5 ತಿಂಗಳ ಗರ್ಭಿಣಿ ಆಗಿದ್ದರು. ಗಲಭೆಯಲ್ಲಿ ಬಿಲ್ಕಿಸ್ ಬಾನು ಅವರ 3 ವರ್ಷದ ಮಗು ಮೃತಪಟ್ಟಿತ್ತು.
ಈ ಸಾಮೂಹಿಕ ಅತ್ಯಾಚಾರ ಮತ್ತು ಬಿಲ್ಕಿಸ್ ಬಾನು ಅವರ ಕುಟುಂಬದ 7 ಜನರ ಹತ್ಯೆ ಆರೋಪದ ಮೇಲೆ 2008ರ ಜನವರಿ 21ರಂದು ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ 11 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.